ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣ: 1ರಿಂದ 5ನೇ ತರಗತಿ ಆರಂಭ ಸದ್ಯಕ್ಕಿಲ್ಲ
ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿಯ ವರೆಗಿನ ಶಾಲಾ ಆರಂಭ ಸದ್ಯಕ್ಕಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 1 ರಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಬೇಡಿಕೆ ಹೆಚ್ಚಾಗಿತ್ತು. ಆದ್ದರಿಂದ ಮಾ.1 ರಿಂದ ಶಾಲೆಗಳು ಆರಂಭವಾಗುತ್ತವೆ ಎನ್ನುವ ನಿರೀಕ್ಷೆಯಿತ್ತು. ಆದರೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಆರಂಭ ಸದ್ಯಕ್ಕಿಲ್ಲ ಸ್ಪಷ್ಟಪಡಿಸಿದ್ದಾರೆ.
ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ 5 ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಇದರೊಂದಿಗೆ ನರೆಯ ರಾಜ್ಯವಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಿನ ಪ್ರಮಾಣದಲ್ಲಿದೆ. ಹೀಗಾಗಿ ಶಾಲೆ ಆರಂಭಿಸಲು ಸಾಧ್ಯವಾಗಿಲ್ಲ. ಇನ್ನೊಂದು ವಾರದಲ್ಲಿ ತಜ್ಞರ ಜೊತೆ ಸಮಾಲೋಚನೆ ನಡೆಸಿ, ಆರೋಗ್ಯ ಇಲಾಖೆ ಸಲಹೆ ಹಾಗೂ ಅವರ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ಸರಕಾರದ ಆದೇಶಕ್ಕೂ ಮೊದಲ ಕೆಲವೆಡೆ ಶಾಲೆಗಳನ್ನು ಆರಂಭಿಸಲಾಗಿದೆ ಎಂಬ ವಿಚಾರಕ್ಕೆ ಸಂಬಂದಿಸಿ ಪ್ರತಿಕ್ರಿಯೆ ನೀಡಿದ ಅವರು, ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳು ಆರಂಭ ಮಾಡುವುದು ಸರಿಯಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಆರೋಗ್ಯದ ಬಗ್ಗೆಯೂ ಸರಕಾರ ಹೆಚ್ಚಿನ ಕಾಳಜಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಯಾವ ಶಾಲೆಗಳು ಆರಂಭವಾಗಿವೆ ಎಂಬುದರ ಕುರಿತು ನಿರ್ದಿಷ್ಟ ದೂರು ಬಂದರೆ ಆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.