ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಸಂಸದ ತಿರತ್ ಸಿಂಗ್ ರಾವತ್ ಆಯ್ಕೆ!

ಡೆಹ್ರಾಡೂನ್: ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತಿರತ್ ಸಿಂಗ್ ರಾವತ್ ಅವರು ಆಯ್ಕೆಯಾಗಿದ್ದಾರೆ ಎಂದು ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು. ಉತ್ತರಾಖಂಡದ ನೂತನ ಸಿಎಂ ಆಗಿ ಬಿಜೆಪಿ ಸಂಸದ ತಿರತ್ ಸಿಂಗ್ ರಾವತ್ ಅವರು ಆಯ್ಕೆಯಾಗಿದ್ದಾರೆ ಎಂದು ತ್ರಿವೇಂದ್ರ ಸಿಂಗ್ ರಾವತ್  ಹೇಳಿದ್ದಾರೆ.

ಮೂಲಗಳ ಪ್ರಕಾರ ರಾಜಧಾನಿ ಡೆಹ್ರಾಡೂನ್ ನಲ್ಲಿ ಇಂದು ಶಾಸತಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು, ಶಾಸಕರು ತಿರತ್ ಸಿಂಗ್ ರಾವತ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆ ನೀಡಿದ್ದರು. ಬಳಿಕ ಸಾಕಷ್ಟು ಚರ್ಚೆಗಳ ಬಳಿಕ ತಿರತ್ ಸಿಂಗ್ ರಾವತ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಬೆಳಿಗ್ಗೆ 10 ಗಂಟೆಗೆ ಶಾಸಕಾಂಗ ಪಕ್ಷದ ಸಭೆಯನ್ನು ರಾಜ್ಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕರೆಯಲಾಗಿತ್ತು. ಎಲ್ಲ ಶಾಸಕರ ಉಪಸ್ಥಿತಿಯಲ್ಲಿ ನಾಯಕನನ್ನು ಆಯ್ಕೆ ಮಾಡಲಾಗಿದ್ದು, ಕೇಂದ್ರ ವೀಕ್ಷಕರಾಗಿ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಸಭೆಯಲ್ಲಿ ಉಪಸ್ಥಿತರಿದ್ದರು.

ಮಾ.07 ರಂದು ಗೈರ್ಸೇನ್ ನಲ್ಲಿ ಬಜೆಟ್ ಅಧಿವೇಶನದ ಸಮಯದಲ್ಲಿ ಬಿಜೆಪಿ ದಿಢೀರ್ ಕೋರ್ ಕಮಿಟಿ ಸಭೆ ನಡೆಸಿ ಸರ್ಕಾರದಲ್ಲಿ ಮಹತ್ವದ ಬದಲಾವಣೆಯ ಸುಳಿವು ನೀಡಿತ್ತು. ಈ ಬೆನ್ನಲ್ಲೇ ತ್ರಿವೇಂದ್ರ ಸಿಂಗ್ ರಾವತ್ ಮಾ.09 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ಉತ್ತರಾಖಂಡ್ ನಲ್ಲಿ ಬಿಜೆಪಿ ಸರ್ಕಾರ ಅಧಿಕಾರಾವಧಿ ಪೂರ್ಣಗೊಳಿಸುವುದಕ್ಕೆ ಇನ್ನೂ ಒಂದು ವರ್ಷ ಬಾಕಿ ಇರುವಾಗ ನಾಯಕತ್ವದ ಬದಲಾವಣೆಯಾಗಿರುವುದು ಅಚ್ಚರಿ ಮೂಡಿಸಿತ್ತು. 

ಬಿಜೆಪಿ ಶಾಸಕರು ತ್ರಿವೇಂದ್ರ ಸಿಂಗ್ ರಾವತ್ ಅವರ ಆಡಳಿತ ಶೈಲಿಯ ಬಗ್ಗೆ ಹೈಕಮಾಂಡ್ ಗೆ ದೂರು ನೀಡಿದ್ದರು. ಈ ಸಂಬಂಧ ಮಾ.08 ರಂದು ದೆಹಲಿಗೆ ಭೇಟಿ ನೀಡಿದ್ದ ರಾವತ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಬಳಿಕ ಸಂಜೆ ನಾಲ್ಕು ಗಂಟೆಗೆ ರಾಜ್ ಭವನವನ್ನು ತಲುಪಿದರು ಮತ್ತು ಅವರು ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. ರಾವತ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು, ರಾಜ್ಯದ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವವರೆಗೂ ಈ ಹುದ್ದೆಯ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಕೇಳಿಕೊಂಡರು.  

2017 ರಲ್ಲಿ ಸಂಪೂರ್ಣ ಬಹುಮತದೊಂದಿಗೆ ಆಡಳಿತಕ್ಕೇರಿದ್ದ ಬಿಜೆಪಿ 69 ಸಂಖ್ಯಾಬಲ ಇರುವ ವಿಧಾನಸಭೆಯಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು.  

Leave a Reply

Your email address will not be published. Required fields are marked *

error: Content is protected !!