ಮಣಿಪಾಲ:ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ಇಬ್ಬರ ಬಂಧನ
ಉಡುಪಿ: ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿವೇಕಾನಂದ ಕಾಮತ್, ಧನಂಜಯ ಬಂಧಿತ ಆರೋಪಿಗಳು.
ಮಣಿಪಾಲದ ಈಶ್ವರ ನಗರದ ಬಳಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಣಿಪಾಲ ಕಾಲೇಜಿನ ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ತಡೆದ ಇಬ್ಬರು ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.
ಕೂಡಲೇ ಈ ವಿಷಯವನ್ನು ವಿದ್ಯಾರ್ಥಿನಿಯು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಣಿಪಾಲ ಪೊಲಿಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಎಸ್ ವಿಷ್ಣುವರ್ಧನರವರು ಮಣಿಪಾಲದಲ್ಲಿನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಹಾಗೂ ಸಾರ್ವಜನಿಕರಿಗೆ ರಾತ್ರಿ ವೇಳೆಯಲ್ಲಿ ತಿರುಗಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ, ಹಾಗೂ ಇಂಥಹ ಕೃತ್ಯವನ್ನು ಎಸಗುವವರು ಯಾರೇ ಆಗಿದ್ದರೂ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ತಿಳಿಸಿದ್ದಾರೆ.