ದಕ.ಉಡುಪಿ,ಚಿಕ್ಕಬಳ್ಳಾಪುರ, ಹಾಸನ,ಕೊಡಗಿನಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಉಡುಪಿ: ಇನ್ನೇನು ಬೇಸಿಗೆ ಆರಂಭವಾಗಿದೆ. ರಾಜ್ಯದಲ್ಲಿ ಅದರಲ್ಲೂ ಕರಾವಳಿಯಲ್ಲಿ ವಿಪರೀತ ಸೆಕೆ ಆರಂಭವಾಗಿದೆ. ಆದರೆ ಇದರ ನಡುವೆಯೇ ರಾಜ್ಯದ 4 ಜಿಲ್ಲೆಗಳಲ್ಲಿ ಮಾರ್ಚ್ 20 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವರಾತ್ರಿ ಬಳಿಕ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿತ್ತು. ಇದೀಗ ಮಾರ್ಚ್ 20 ರಂದು ಮತ್ತೆ ಮಳೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗಿನಲ್ಲಿ ಜೋರು ಮಳೆಯಾಗಲಿದೆ. ಹಾಗೂ ಉತ್ತರ ಕನ್ನಡದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸೆಕೆ ಸ್ವಲ್ಪ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.
ಇನ್ನು ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್‍ನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಕಲಬುರಗಿಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.