ಕೇರಳ: ಬಿಜೆಪಿಗೆ ಬಿಗ್ ಶಾಕ್ – ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಆಘಾತಕ್ಕೊಳಗಾಗಿದೆ. ಮೂವರು ಎನ್ಡಿಎ ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.
ತಲಚೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ಕಣ್ಣೂರು ಜಿಲ್ಲಾ ಘಟಕ ಅಧ್ಯಕ್ಷ ಹರಿದಾಸ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಅಭ್ಯರ್ಥಿ ನೀಡಿದ ಫಾರಂ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಹಿ ಇಲ್ಲ ಎಂಬ ಕಾರಣಕ್ಕೆ ನಾಮಪತ್ರವನ್ನು ತಿರಸ್ಕರಿಸಲಾಗಿದೆ.
ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ನಿವೇದಿತಾ ಸುಬ್ರಮಣ್ಯಂ ಅವರ ನಾಮಪತ್ರವನ್ನೂ ಇದೇ ಕಾರಣಕ್ಕೆ ತಿರಸ್ಕರಿಸಲಾಗಿದೆ.
ಇನ್ನೂ ಇಡುಕ್ಕಿಯ ದೇವಿಕುಲಂ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಧನಲಕ್ಷ್ಮಿ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಫಾರಂ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿಲ್ಲ ಎಂಬ ಕಾರಣಕ್ಕೆ ರಿಟರ್ನಿಂಗ್ ಅಧಿಕಾರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಎಐಎಡಿಎಂಕೆ ಅಭ್ಯರ್ಥಿಯನ್ನು ಬಿಜೆಪಿ ಬೆಂಬಲಿಸುತ್ತಿದೆ.
ಆದರೆ, ಇಬ್ಬರು ಬಿಜೆಪಿ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ತಿರಸ್ಕರಿಸಿರುವ ಚುನಾವಣಾಧಿಕಾರಿ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಸಂಬಂಧ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.