ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜು: ಪತ್ರಿಕಾ ವರದಿಗಾರಿಕೆ ಮತ್ತು ಮಾಹಿತಿ ಕಾರ್ಯಾಗಾರ
ಹೆಬ್ರಿ : ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎನ್ನೆಸ್ಸೆಸ್ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಹಾಗೂ ಚಾಣಕ್ಯ ಟ್ಯುಟೋರಿಯಲ್ ಕಾಲೇಜು ಹೆಬ್ರಿ ಇವರ ಸಹಯೋಗದೊಂದಿಗೆ ಶಾಲಾ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಗೆ ಪತ್ರಿಕಾ ವರದಿಗಾರಿಕೆ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು ಕಾಲೇಜಿನಲ್ಲಿ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಡಾ. ಭಾರ್ಗವಿ ಐತಾಳ್ ಅವರು ಮಾತನಾಡಿ, ಪತ್ರಿಕೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆ ಮೂಲಕ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡಾಗ ಸುತ್ತಮುತ್ತಲಿನ ಘಟನೆಗಳ ಬಗ್ಗೆ ಮಾಹಿತಿ ಪಡೆದು ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲ ದಿವಾಕರ ಮರಕಾಲ ಮಾತನಾಡಿ, ಸೇವಾ ಭಾವನೆಯನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಸುಂದರವಾಗುತ್ತದೆ ಎಂದ ಅವರು, ಲಯನ್ಸ್ ಸಂಸ್ಥೆ ಉತ್ತಮ ಸಾಮಾಜಿಕ ಚಟುವಟಿಕೆ ಮೂಲಕ ಗ್ರಾಮೀಣ ಭಾಗದಲ್ಲಿ ಉತ್ತಮ ಸೇವಾ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪತ್ರಕರ್ತ ಹೆಬ್ರಿ ಉದಯಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪತ್ರಿಕಾ ವರದಿಗಾರಿಕೆ ಮತ್ತು ಪತ್ರಿಕೋದ್ಯಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ರಾಮಚಂದ್ರ ಭಟ್ , ಎನ್ನೆಸ್ಸೆಸ್ ಅಧಿಕಾರಿ ಮಂಜೇಗೌಡ , ರಕ್ಷಿತಾ ಮೊದಲಾದವರು ಉಪಸ್ಥಿತರಿದ್ದರು.