ಕೋವಿಡ್-19 ಸೋಂಕಿನ ಆರ್ಭಟ: ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ
ಮುಂಬೈ: ದೇಶದಲ್ಲಿ ಕೋವಿಡ್-19 ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಹೌದು.. ದಿನೇ ದಿನೇ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇದೇ ಭಾನುವಾರ ಅಂದರೆ ಮಾರ್ಚ್ 28ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ಕಚೇರಿ ಮಾಹಿತಿ ನೀಡಿದ್ದು, ಕೋವಿಡ್-19 ಹರಡುವಿಕೆಯನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ‘ಕಟ್ಟುನಿಟ್ಟಾಗಿ ಜಾರಿಗೊಳಿಸಲು’ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದರಂತೆ ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 7ರವರೆಗೆ ಎಲ್ಲಾ ಮಾಲ್ಗಳು ಮುಚ್ಚಲ್ಪಡುತ್ತವೆ.
ಇದಲ್ಲದೆ, ಸೋಂಕು ಹೆಚ್ಚಿರುವ ಆಯ್ದ ಪ್ರದೇಶಗಳಲ್ಲಿ ಸಂಭವನೀಯ ಲಾಕ್ ಡೌನ್ ಕೂಡ ಜಾರಿ ಮಾಡಬಹುದು ಎಂದು ಹೇಳಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಕೊರೊನಾ ವೈರಸ್ನಿಂದ ಅಪಾಯ ಎದುರಾಗುವುದು ಮುಗಿದಿಲ್ಲ. ಇದಕ್ಕೆ ಬದಲಾಗಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಇದನ್ನು ಅರ್ಥಮಾಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳು ಲಾಕ್ಡೌನ್ ವಿಧಿಸಬಹುದು. ಆದರೆ ಅವರು ಮೊದಲೇ ಜನರಿಗೆ ಸಾಕಷ್ಟು ಸಮಯವನ್ನು ನೀಡಬೇಕಾಗುತ್ತದೆ. ಹೆಚ್ಚುತ್ತಿರುವ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದೆ. ಲಾಕ್ಡೌನ್ ಹೇರಲು ನಾನು ಬಯಸುವುದಿಲ್ಲ. ಆದಾಗ್ಯೂ, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳು ಕಡಿಮೆಯಾಗಬಹುದು ಎಂದು ಸಿಎಂ ಕಚೇರಿ ಎಚ್ಚರಿಸಿದೆ.
ಎಲ್ಲಾ ಜಿಲ್ಲೆಗಳಲ್ಲಿ ತಮ್ಮ ಆರೋಗ್ಯ ಮೂಲಸೌಕರ್ಯ ಮತ್ತು ಹಾಸಿಗೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ನಗರಸಭೆ ಆಯುಕ್ತರು, ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ನಾಗರಿಕ ಶಸ್ತ್ರಚಿಕಿತ್ಸಕರು ಮತ್ತು ಕೋವಿಡ್ -19 ಕಾರ್ಯಪಡೆಯ ಸದಸ್ಯರು ಹಾಜರಿದ್ದ ಸಭೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಈ ಸಭೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಾಜೇಶ್ ತೋಪೆ, ವೈದ್ಯಕೀಯ ಶಿಕ್ಷಣ ಸಚಿವ ಅಮಿತ್ ದೇಶ್ಮುಖ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು