ಆಪರೇಷನ್ ಕಮಲ: ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು
ಬೆಂಗಳೂರು: ಶಾಸಕರಿಗೆ ಹಣದ ಆಮಿಷ ಒಡ್ಡಿ ಆಪರೇಷನ್ ಕಮಲ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.
ಆಪರೇಷನ್ ಕಮಲ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಎಫ್ಐಆರ್ ಗೆ ತಡೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ಪುರಷ್ಕರಿಸಿದ್ದ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈಗ ತಡೆಯಾಜ್ಞೆ ತೆರವುಗೊಳಿಸರುವ ಹೈಕೋರ್ಟ್, ಸಿಎಂ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಆದೇಶ ನೀಡಿದೆ.
ನಮ್ಮ ತಂತದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಹಣದ ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಅವರ ಪುತ್ರ ಶರಣಗೌಡ ಪಾಟೀಲ್ ಕಂದಕೂರ ಅವರು ಬಿ.ಎಸ್. ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಈ ಕುರಿತು ಆಡಿಯೋ ಸಹ ಬಿಡುಗಡೆ ಮಾಡಿದ್ದರು.
ಯಡಿಯೂರಪ್ಪ ಅವರು ಮಾತನಾಡಿದ್ದ ಆಡಿಯೋ ಕ್ಲಿಪ್ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು. ಅಂದಿನ ಸ್ಪೀಕರ್ ರಮೇಶ್ ಕುಮಾರ್ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಿರಲಿಲ್ಲ.