ಮುಂಬೈ: ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆ- ಮತ್ತೆ ಲಾಕ್‌ಡೌನ್?

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇಂದು ರಾತ್ರಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯದಲ್ಲಿ ಕೋಡ್ ಎರಡನೇ ಅಲೆ ಕಾಣಿಸಿಕೊಂಡಿದ್ದು ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಮುಂಬೈಯಲ್ಲಿ ಪ್ರತಿದಿನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಗಂಭೀರ ವಿಷಯವಾಗಿದೆ. ಪ್ರಕರಣಗಳ ಏರಿಕೆಯಿಂದಾಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ, ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ಮುನ್ನೆಚ್ಚರಿಕೆ ವಹಿಸುವಂತೆ ಜನರಲ್ಲಿ ಮಾರ್ಚ್ ತಿಂಗಳಿನಿಂದಲೇ ಮನವಿ ಮಾಡುತ್ತಿದ್ದೇವೆ. ಆದರೆ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ.

ಯಾರೂ ಕೂಡ ಲಾಕ್‌ಡೌನ್ ಬೇಕೆಂದು ಬಯಸುತ್ತಿಲ್ಲ. ಆದರೆ ಪ್ರಕರಣಗಳು ಹೆಚ್ಚಾಗುವುದನ್ನು ಮತ್ತು ಆರೋಗ್ಯ ಮೂಲಸೌಕರ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ನಿಭಾಯಿಸುವ ಸಲುವಾಗಿ ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಪುಣೆಯಲ್ಲಿ ಶನಿವಾರದಿಂದ ರಾತ್ರಿ ಕರ್ಫ್ಯೂ ಘೋಷಿಸಲಾಗಿದ್ದು, ಬಾರ್‌, ಹೋಟೆಲ್‌, ರೆಸ್ಟೋರೆಂಟ್‌ಗಳು 7 ದಿನಗಳ ಕಾಲ ಮುಚ್ಚಿರಲಿವೆ.

ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 81,466 ಹೊಸ ಕೊವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಮಹಾರಾಷ್ಟ್ರದಲ್ಲಿ ಸದ್ಯ 3,67,897 ಸಕ್ರಿಯ ಪ್ರಕರಣಗಳಿವೆ. ಒಟ್ಟಾರೆ ಈವರೆಗೆ 28,56,163 ಜನರಿಗೆ ಸೋಂಕು ತಗುಲಿದೆ. 

Leave a Reply

Your email address will not be published. Required fields are marked *

error: Content is protected !!