ನಿಷೇಧದ ಹೊರತಾಗಿಯೂ ಜಾತ್ರೆಗಳು ನಡೆದರೆ ಜಿಲ್ಲಾಧಿಕಾರಿಗಳೇ: ಸಚಿವ ಆರ್ ಅಶೋಕ್

ಬೆಂಗಳೂರು ಎ.17: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಹಿನ್ನೆಲೆ ಕಟ್ಟು ನಿಟ್ಟಿನ ಕ್ರಮಕ್ಕೆ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು.

ಈ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು, ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಇದರ ಹೊರತಾಗಿಯೂ ಜಾತ್ರೆಗಳು ನಡೆದರೆ ಅದಕ್ಕೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಹೊಣೆ,  ಸಣ್ಣ ಜಾತ್ರೆಗಳಾದರೆ ಅದಕ್ಕೆ ತಹಶೀಲ್ದಾರ್ ಹೊಣೆಯಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿ, ಕಲ್ಯಾಣ ಮಂಟಪ ಬುಕ್ ಮಾಡಲು ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ ವಾಗಿದ್ದು, ಮದುವೆ ಸಮಾರಂಭದಲ್ಲಿ ಭಾಗವಹಿಸುವವರಿಗೆ ಜಿಲ್ಲಾಡಳಿತ ನಿಗದಿತ ಸಂಖ್ಯೆಯ ಪಾಸ್ ವಿತರಿಸಲಿದೆ. ಆದರೆ ಈಗಾಗಲೇ ಬುಕ್ ಮಾಡಿದ್ದರೆ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಇನ್ನು 7,500 ಆಕ್ಸಿಜನ್ ಸಿಲಿಂಡರ್ ಪೂರೈಕೆಗೆ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. 

Leave a Reply

Your email address will not be published. Required fields are marked *

error: Content is protected !!