18 ವರ್ಷ ದಾಟಿದ ಎಲ್ಲರಿಗೂ ಲಸಿಕೆ: ಮೋದಿ ನೇತೃತ್ವದ ಸಭೆಯಲ್ಲಿ ನಿರ್ಧಾರ
ನವದೆಹಲಿ: ಕೋವಿಡ್ ತಡೆಯ ಮೂರನೇ ಹಂತದ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ಮೇ 1ರಿಂದ ಆರಂಭಿ ಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೂರನೇ ಹಂತದಲ್ಲಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸೋಮವಾರ ನಡೆದ ತುರ್ತುಸಭೆಯಲ್ಲಿ ಕೇಂದ್ರ ಸರ್ಕಾರ ಮೂರನೇ ಹಂತದ ಲಸಿಕೆ ಕಾರ್ಯಕ್ರಮವನ್ನು ಘೋಷಿಸಿದೆ. ಈ ಹಂತದಲ್ಲಿ ರಾಜ್ಯ ಸರ್ಕಾರಗಳು ತಮಗೆ ಅಗತ್ಯವಿರುವ ಲಸಿಕೆಯನ್ನು ತಯಾರಕರಿಂದ ನೇರ ವಾಗಿ ಮುಕ್ತ ಮಾರುಕಟ್ಟೆಯಲ್ಲಿ ಖರೀದಿ ಸಲು ಅವಕಾಶ ಮಾಡಿಕೊಟ್ಟಿದೆ.
ಈಗ ಜಾರಿಯಲ್ಲಿರುವ 1 ಮತ್ತು 2ನೇ ಹಂತದ ಲಸಿಕೆ ಕಾರ್ಯಕ್ರಮ ಮುಂದು ವರಿಯಲಿದೆ. ಮುಂಚೂಣಿಯ ಕೋವಿಡ್ ಕಾರ್ಯಕರ್ತರಿಗೆ ಮತ್ತು 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡಲಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
‘ದೇಶದ ಎಲ್ಲರಿಗೂ ಲಸಿಕೆ ಲಭ್ಯವಾಗಬೇಕು ಎಂಬ ಉದ್ದೇಶವನ್ನು ಈಡೇರಿಸಲು ಕೇಂದ್ರ ಸರ್ಕಾರ ಒಂದು ವರ್ಷದಿಂದ ಶ್ರಮಿಸುತ್ತಿದೆ. ಭಾರತವು ದಾಖಲೆ ಸಂಖ್ಯೆಯಲ್ಲಿ ಲಸಿಕೆ ನೀಡುತ್ತಿದೆ. ಇದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಲಾಗುವುದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
‘ಲಸಿಕೆ ತಯಾರಿಕೆಯನ್ನು ಹೆಚ್ಚಿಸಲು ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದು ಕೊಂಡಿದೆ. ಲಸಿಕೆ ತಯಾರಕರ ಜತೆ ಚರ್ಚೆ ನಡೆಸಲಾಗಿದೆ. ಪ್ರತಿ ಕಂಪನಿಯ ಸಾಮರ್ಥ್ಯ ಹೆಚ್ಚಿಸಲು ಅಗತ್ಯವಿರುವ ನೆರವು ನೀಡಲಾಗುತ್ತಿದೆ’ ಎಂದಿದ್ದಾರೆ.
1) ಮುಂಚೂಣಿಯ ಕೋವಿಡ್ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡಲಿದೆ. ಈ ಲಸಿಕೆ ಕಾರ್ಯಕ್ರಮ ಎಂದಿನಂತೆ ಮುಂದುವರಿಯಲಿದೆ
2) ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮುಂಚೂಣಿ ಕೋವಿಡ್ ಕಾರ್ಯಕರ್ತರಲ್ಲಿ ಈಗಾಗಲೇ ಮೊದಲ ಡೋಸ್ ಪಡೆದವರಿಗೆ, ಎರಡನೇ ಡೋಸ್ ನೀಡಲು ಆದ್ಯತೆ ನೀಡಲಾಗುತ್ತದೆ
3) ರಾಜ್ಯಗಳಲ್ಲಿ ಕೋವಿಡ್ ಸಾಂಕ್ರಾಮಿಕದ ಮಟ್ಟವನ್ನು ನೋಡಿಕೊಂಡು ಕೇಂದ್ರ ಸರ್ಕಾರದಿಂದ ಲಸಿಕೆ ಪೂರೈಕೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಗಳು ತಮ್ಮ ಲಸಿಕೆ ಪೋಲಿನ ಪ್ರಮಾಣವನ್ನೂ ಸೇರಿಸಿ, ಲಸಿಕೆಗೆ ಬೇಡಿಕೆ ಇಡಬೇಕು
4) ಮೂರನೇ ಹಂತದ ಲಸಿಕೆ ಕಾರ್ಯಕ್ರಮವು ಮೇ 1ರಿಂದ ಜಾರಿಯಾದರೂ, ನಂತರದ ದಿನಗಳಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ
5) 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯ ಸರ್ಕಾರಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ರೂಪಿಸಿಕೊಳ್ಳಬಹುದು. ಆದರೆ, ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಕೋವಿನ್ ಅಪ್ಲಿಕೇಷನ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಈಗ ಜಾರಿಯಲ್ಲಿರುವ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು
ಲಸಿಕೆ ಮುಕ್ತ ಮಾರುಕಟ್ಟೆಗೆ
ಮೇ 1ರಿಂದ ಅನ್ವಯವಾಗುವಂತೆ ಕೋವಿಡ್ ಲಸಿಕೆಯನ್ನು ರಾಜ್ಯ ಸರ್ಕಾರಗಳು ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರವು ಅನುವು ಮಾಡಿಕೊಟ್ಟಿದೆ.
ಲಸಿಕೆ ತಯಾರಿಕಾ ಕಂಪನಿಗಳು ತಾವು ತಯಾರಿಸುವ ಲಸಿಕೆಯ ಡೋಸ್‌ಗಳಲ್ಲಿ ಶೇ 50ರಷ್ಟನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕು. ಉಳಿಕೆ ಶೇ 50ರಷ್ಟು ಲಸಿಕೆಯ ಡೋಸ್‌ಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ರಾಜ್ಯ ಸರ್ಕಾರಗಳಿಗೆ ಮಾರಾಟ ಮಾಡಬಹುದು ಎಂದು ಕೇಂದ್ರ ಸರ್ಕಾರವು ಸೂಚಿಸಿದೆ. ಕಂಪನಿಗಳು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಲಸಿಕೆಯ ಬೆಲೆಯನ್ನು ಮೇ 1ರ ಮೊದಲೇ ಘೋಷಿಸಬೇಕು. ರಾಜ್ಯ ಸರ್ಕಾರಗಳು ತಮಗೆ ಸರಿಹೊಂದುವ ಕಂಪನಿಯಿಂದ ಲಸಿಕೆಯನ್ನು ಖರೀದಿಸಬಹುದು ಎಂದು ಹೇಳಿದೆ.
ಕಂಪನಿಗಳು ಮೊದಲೇ ಘೋಷಿಸಿರುವ ಬೆಲೆಯಲ್ಲಿ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು, ಉದ್ದಿಮೆಗಳು ಖರೀದಿಸಬಹುದು. ಉದ್ದಿಮೆಗಳೂ ಲಸಿಕೆ ಕಾರ್ಯಕ್ರಮವನ್ನು ನಡೆಸಬಹುದು. ಖಾಸಗಿ ಆಸ್ಪತ್ರೆಗಳು ಪ್ರತಿ ಡೋಸ್ ಲಸಿಕೆ ನೀಡಲು ವಿಧಿಸುವ ಶುಲ್ಕವನ್ನು ಬಹಿರಂಗವಾಗಿ ಘೋಷಿಸಬೇಕು ಎಂದು ಕೇಂದ್ರ ಸರ್ಕಾರವು ಹೇಳಿದೆ.
ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಇಂದು
ಬೆಂಗಳೂರು: ಕೋವಿಡ್ ಹೆಚ್ಚಳದಿಂದಾಗುತ್ತಿರುವ ಪರಿಣಾಮ ಹಾಗೂ ಪರಿಸ್ಥಿತಿ ಪರಿಶೀಲಿಸಿ ನಿಯಂತ್ರಣ ಕ್ರಮ ಕೈಗೊಳ್ಳುವ ಕುರಿತು ವಿಧಾನ ಮಂಡಲದ ಉಭಯ ಸದನಗಳ ನಾಯಕರು ಹಾಗೂ ರಾಜಕೀಯ ಪಕ್ಷಗಳ ಪ್ರಮುಖರ ಜತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ (ಏ.20) ವರ್ಚುವಲ್ ಸಭೆ (ವಿಡಿಯೊ ಸಂವಾದ) ನಡೆಸಲಿದ್ದಾರೆ.
ಸಂಜೆ 4.30ಕ್ಕೆ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ವಹಿಸಲಿದ್ದಾರೆ. ಕೋವಿಡ್ ಕಾರಣದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಅಲ್ಲಿಂದಲೇ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಸಂಸದ ನಳಿನ್‌ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕರಾದ ಜಿ. ಪರಮೇಶ್ವರ, ಎಚ್.ಡಿ. ರೇವಣ್ಣ ಅವರಿಗೆ ಆಹ್ವಾನ ನೀಡಲಾಗಿದೆ.
ಕಠಿಣ ನಿಯಮ ಪ್ರಕಟ ಸಾಧ್ಯತೆ
ವೇಗವಾಗಿ ಹರಡುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದ್ದು, ಪರಿಷ್ಕೃತ ಮಾರ್ಗಸೂಚಿ ಮಂಗಳವಾರ ಪ್ರಕಟವಾಗಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ, ‘ತಜ್ಞರ ವರದಿ ಆಧರಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೇ ನೀಡಲಾಗಿದೆ. ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಬಳಿಕ ಕಟ್ಟುನಿಟ್ಟಿನ ನಿಯಮಗಳನ್ನು ಮುಖ್ಯಮಂತ್ರಿ ಪ್ರಕಟಿಸಲಿದ್ದಾರೆ’ ಎಂದರು.