ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ, ಸಾಧ್ಯವಾದಷ್ಟು ಉತ್ತಮ ಆರೈಕೆ ಮಾಡಲಾಗುತ್ತಿದೆ: ಸಚಿವ ಹರ್ಷ ವರ್ಧನ್
ನವದೆಹಲಿ: ಕೋವಿಡ್-19 ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಸಾಧ್ಯವಾದಷ್ಟು ಉತ್ತಮ ಆರೈಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ಮನಮೋಹನ್ ಸಿಂಗ್ ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಅವರು, ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡಲಾಗುತ್ತಿದೆ. ಅವರ ಶೀಘ್ರ ಚೇತರಿಕೆಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಸೋಮವಾರ ಬೆಳಿಗ್ಗೆ ಮಾಜಿ ಪ್ರಧಾನಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಡಾ.ಮನಮೋಹನ್ ಸಿಂಗ್ ಅವರಿಗೆ ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುತ್ತು. ಈ ವೇಳೆ ಅವರ ವರದಿ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್)ಆಸ್ಪತ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ನುರಿತ ಮತ್ತು ಹಿರಿಯ ವೈದ್ಯರು ಮನಮೋಹನ್ ಸಿಂಗ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಎರಡೂ ಕೋವಿಡ್ ಲಸಿಕೆ ಡೋಸ್ ಪಡೆದಿದ್ದ ಡಾ.ಸಿಂಗ್
ಇನ್ನು ಮನಮೋಹನ್ ಸಿಂಗ್ ಅವರು ಕೋವಿಡ್ ಸೋಂಕಿಗೆ ತುತ್ತಾಗುವ ಮುನ್ನ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿದ್ದರು. ಮಾರ್ಚ್ 4 ಮೊದಲ ಡೋಸ್ ಮತ್ತು ಏಪ್ರಿಲ್ 3 ರಂದು 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿದ್ದರು. ಇದಾಗ್ಯೂ ಅವರಿಗೆ ಸೋಂಕು ತಗುಲಿದೆ. ಇನ್ನು ಮನಮೋಹನ್ ಸಿಂಗ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ವಿದೇಶಾಂಗ ಸಚಿವ ಎಸ್ ಜೈಶಂಕರ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಮತ್ತು ಇತರ ನಾಯಕರು ಹಾರೈಸಿದ್ದಾರೆ.