ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಮೇ 29 ರಂದು ಅಂತಿಮ ತೀರ್ಪು

ಉಡುಪಿ, ಎ.20 (ಉಡುಪಿ ಟೈಮ್ಸ್ ವರದಿ): ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಕೊನೆಗೂ ಅಂತ್ಯ ಕಾಣುವ ಕಾಲ ಸನ್ನಿಹಿತವಾಗಿದೆ. ಇದೇ ಮೇ. 29 ರಂದು ಪ್ರಕರಣದ ಅಂತಿಮ ತೀರ್ಪು ಪ್ರಕಟಗೊಳ್ಳಲಿದೆ. ಈ ಮೂಲಕ ಪ್ರಕರಣ ಕ್ಕೊಂದು ತಾರ್ಕಿಕ ಅಂತ್ಯ ಸಿಗಲಿದೆ. 

ಇಂದು  ಪ್ರಕರಣಕ್ಕೆ ಸಂಬಂಧಿಸಿ  ಅಂತಿಮ ವಿಚಾರಣೆ ನಡೆದಿದ್ದು ,ವಾದ ಪ್ರತಿವಾದವನ್ನು ಆಲಿಸಿದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಹಾಜರಿದ್ದರು.

2021ರ ಮಾ.30ರಿಂದ ಆರಂಭದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಅಂತಿಮ ವಾದ ಮಂಡಿಸಿದ್ದರು, ನಂತರ ಆರೋಪಿಗಳ ಪರ ವಕೀಲರು ಪ್ರತಿವಾದವನ್ನು ಮಂಡಿಸಿದ್ದರು. ಇಂದಿಗೆ ವಾದ ಪ್ರತಿವಾದದ ಪ್ರಕ್ರಿಯೆಗಳು ಪೂರ್ಣಗೊಂಡವು.

2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಡಲಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಪೊಲೀಸರು  ತನಿಖೆ ನಡೆಸಿದ ಈ ಕೊಲೆ  ಪ್ರಕರಣ ಬೆಳಕಿಗೆ ಬಂದಿತ್ತು. ಆ ಬಳಿಕ ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್‌ನನ್ನು ಮತ್ತು ಆ. 8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ದೊರೆತರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟಿದ್ದು, ರಾಘವೇಂದ್ರ ಎಂಬಾತ ಜಾಮೀನು ಪಡೆದುಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!