ಭಾರತದಲ್ಲಿ ಕೊರೋನಾ ಸ್ಪೋಟ: 24 ತಾಸುಗಳಲ್ಲಿ 4 ಲಕ್ಷಕ್ಕೂ ಹೆಚ್ಚು ಕೇಸ್ ಪತ್ತೆ, 3,523 ಮಂದಿ ಸಾವು
ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಭಾರೀ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಶನಿವಾರ ಸೋಂಕು ಮತ್ತೊಂದು ದಾಖಲೆ ಸೃಷ್ಟಿಸಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 4,01,993 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3523 ಮಂದಿ ಸಾವನ್ನಪ್ಪಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,11,853ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,68,710ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,99,988 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,56,84,406 ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ದಿನ 19,45,299 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,83,37,385 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15,49,89,635 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.