ಆಕ್ಸಿಜನ್ ಸಿಗದೆ 24 ರೋಗಿಗಳ ಸಾವು- ಮುಖ್ಯಮಂತ್ರಿ, ಆರೋಗ್ಯ ಸಚಿವ ನೈತಿಕ ಹೊಣೆ ಹೊತ್ತುರಾಜೀನಾಮೆ ನೀಡಿ: ಸಿದ್ದರಾಮಯ್ಯ
ಬೆಂಗಳೂರು ಮೇ.3(ಉಡುಪಿ ಟೈಮ್ಸ್ ವರದಿ): ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆಯಿಂದ 24 ಕೋವಿಡ್ ಸೋಂಕಿತರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಅವರು ಟ್ವೀಟ್ ಮಾಡಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಂದಿದ್ದಾರೆ. ಅಲ್ಲದೆ,ಜನರ ಜೀವ ರಕ್ಷಿಸಲಾಗದ ಸರಕಾರ ಇರುವುದಕ್ಕಿಂತ ತೊಲಗುವುದು ಲೇಸು ಎಂದು ತಿಳಿಸಿದ್ದಾರೆ.ಈ ಬಗ್ಗೆ ತಮ್ಮ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು.
ಈ ಸಾವಿಗೆ ರಾಜ್ಯ ಬಿಜೆಪಿ ಸರಕಾರದ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂದು ಬರೆದು ಕೊಂಡಿದ್ದಾರೆ. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದು ಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿ ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಮುಖ್ಯ ಮಂತ್ರಿಯವರ ಬಳಿ ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.