ಉಡುಪಿ: ಇಂದೂ‌ ಕೂಡ ಸಾವಿರ ದಾಟಿದ ಸೋಂಕಿತರ ಸಂಖ್ಯೆ- ಆರು ಮಂದಿ ಬಲಿ

ಉಡುಪಿ, ಮೇ.6(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏಕಾಏಕಿಯಾಗಿ‌ ಏರುತ್ತಿದೆ. ಇಂದು ಜಿಲ್ಲೆಯಲ್ಲಿ 1526 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,ಆರು ಮಂದಿ ಸೋಂಕಿತರು ಮೃತಪಟ್ಡಿದ್ದಾರೆ. ಇದೀಗ ಕೋವಿಡ್ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಜೊತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿದೆ.

ಇಂದು ಜಿಲ್ಲೆಯಲ್ಲಿ ಪತ್ತೆಯಾದ ಕೊರೋನಾ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿ ತಾಲೂಕಿನಲ್ಲಿಯೇ ಬರೋಬ್ಬರಿ 682 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಕುಂದಾಪುರದಲ್ಲಿಯೂ 595 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಕಾರ್ಕಳದಲ್ಲಿ 242 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5061ಕ್ಕೆ ಏರಿಕೆಯಾಗಿದೆ.ಇಂದು ಜಿಲ್ಲೆಯಲ್ಲಿ ಉಡುಪಿಯ 47 ವರ್ಷದ ಓರ್ವ ಮಹಿಳೆ, 72 ವರ್ಷದ , 69 ವರ್ಷದ, 87 ವರ್ಷದ ಪುರುಷರು ಹಾಗೂ ಕಾರ್ಕಳದ 62 ವರ್ಷದ ಮಹಿಳೆ ಮತ್ತು ಕುಂದಾಪುರದ 64 ವರ್ಷದ ಓರ್ವ ಪುರುಷ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಮೇ.5 ರಂದು 384 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಮೇ.5ರ ವೇಳೆಗೆ ಜಿಲ್ಲೆಯಲ್ಲಿ   ಒಟ್ಟು 520490 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 36,892 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 31,619 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ212 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದೀಗ ಕೋವಿಡ್ ಸಕ್ರಿಯ ಪ್ರಕರಣ ಗಳು ಹೆಚ್ಚಾಗುತ್ತಿರುವ ಜೊತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿಸಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 328 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 17212ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  49,058 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 23,706 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8.87,086ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 139 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 18943 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,55,797ಕ್ಕೆ ಏರಿಕೆಯಾಗಿದೆ. ಇನ್ನು 5,17,075 ಸಕ್ರೀಯ ಪ್ರಕರಣಗಳಿವೆ.

Leave a Reply

Your email address will not be published. Required fields are marked *

error: Content is protected !!