ಕೇಂದ್ರಕ್ಕೆ ಹಿನ್ನಡೆ: ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವ ಬಗ್ಗೆ ಹೈಕೋರ್ಟ್ ಆದೇಶ ಎತ್ತಿಹಿಡಿದ ‘ಸುಪ್ರೀಂ’!
ನವದೆಹಲಿ ಮೇ.7: ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂಬ ಹೈ ಕೋರ್ಟ್ ಆದೇಶ ವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶ ವಿರುದ್ದ ಸುಪ್ರಿಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಕೋರ್ಟ್ ನ್ಯಾಯ ಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಕೇಂದ್ರ ಸರಕಾರದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಇನ್ನು ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 414,188 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 21,491,598 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,915 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 234,083 ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಪೈಕಿ ಈವರೆಗೆ 1,76,12,351 ಜನರು ರೋಗದಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 36,45,164 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.