ಕೊರೋನಾ ನಿರ್ವಹಣೆ: ರಾಜ್ಯದ 17 ಡಿಸಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ, ಸಿಎಂ ಯಡಿಯೂರಪ್ಪ ಭಾಗಿ
ಉಡುಪಿ, ಮೇ.18(ಉಡುಪಿ ಟೈಮ್ಸ್ ವರದಿ): ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಮೇಲ್ವಿಚಾರಣೆಯನ್ನು ನೋಡಿ ಕೊಳ್ಳುವುದು ರಾಜ್ಯದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದ್ದು,ಜಿಲ್ಲಾಧಿಕಾರಿಗಳು ಕಮಾಂಡರ್ ಆಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಮುಕ್ತ ಜಿಲ್ಲೆಯನ್ನು ನಿರ್ಮಿಸುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದ ಅವರು, ಜನ ಪ್ರತಿನಿಧಿಗಳೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಗಳನ್ನು ರಚಿಸಿ, ವ್ಯಾಕ್ಸಿನೇಷನ್ ಮತ್ತು ಕೋವಿಡ್ ಜಾಗೃತಿ ಬಗ್ಗೆ ಮಾಹಿತಿ ನೀಡಬೇಕು” ತುರ್ತು ಅಗತ್ಯಗಳಿಗೆ ಕಾರ್ ಆಂಬ್ಯುಲೆನ್ಸ್ ಸಿದ್ಧಪಡಿಸಿಟ್ಟುಕೊಂಡಿರಬೇಕು, ಜಿಲ್ಲೆಗಳಲ್ಲಿ ಆಂಬುಲೆನ್ಸ್ ಕೊರತೆಯಾಗದಂತೆ ನೋಡಿಕೊಳ್ಳಬೇಕು.
ಆಮ್ಲಜನಕದ ನಿರ್ವಹಣೆ ಕೂಡ ಮುಖ್ಯವಾಗಿದ್ದು ಅದನ್ನು ನ್ಯಾಯಯುತವಾಗಿ ಬಳಸಿಕೊಳ್ಳಬೇಕು ಹಾಗೂ ಕೊರೊನಾ ಮುಕ್ತ ಗ್ರಾಮ ನಿರ್ಮಾಣ ಜಿಲ್ಲಾಧಿಕಾರಿಗಳ ಧ್ಯೇಯವಾಕ್ಯವಾಗಿರಬೇಕು ಎಂದು ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭಾಗವಹಿಸಿದ್ದರು. ಇವರೊಂದಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಉಡುಪಿ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರ್ಗಿ, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಭಾಗವಹಿಸಿದ್ದರು.