ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ: ಸಿಎಂ
ಬೆಳಗಾವಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಕೊರೋನಾ ಸೋಂಕು ಕಡಿಮೆಯಾದರೆ ನಡೆಸುತ್ತೇವೆ, ಇಲ್ಲದಿದ್ದರೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಜುಲೈ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ ಮಾಡಲಾಗುವುದು. ಕೊವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಆಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶವಿದೆ. ಹೊಸ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಇಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರಕಟಿಸಿದ್ದರು.
ಈ ಬಗ್ಗೆ ಮಾಧ್ಯಮದವರು ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದಾಗ, ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದು ಈಗಿನ ಸದ್ಯದ ನಿರ್ಧಾರ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಕೊರೋನಾ ಸೋಂಕು ಇಳಿಮುಖವಾದರೆ ಪರೀಕ್ಷೆ, ಇಲ್ಲದಿದ್ದರೆ ಇಲ್ಲ ಎಂದು ಸ್ಪಷ್ಟಪಡಿಸಿದರು