ತನಿಖೆ ಹಂತದಲ್ಲಿರುವ ಪ್ರಕರಣಗಳ ಮಾಹಿತಿ ನೀಡಲು ಮಾರ್ಗಸೂಚಿ ರೂಪಿಸಿ: ಹೈಕೋರ್ಟ್
ಬೆಂಗಳೂರು: ತನಿಖೆ ಹಂತದಲ್ಲಿರುವ ಪ್ರಕರಣಗಳ ಮಾಹಿತಿಯನ್ನು ಪೊಲೀಸರು ಮಾಧ್ಯಮಗಳಿಗೆ ನೀಡುವುದನ್ನು ತಡೆಯಲು ಸಮಗ್ರ ಮಾರ್ಗಸೂಚಿ ರೂಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ‘ಮಾರ್ಗಸೂಚಿ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡರೆ ಮಾತ್ರ ಉದ್ದೇಶ ಈಡೇರಲಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.
ವಕೀಲ ಎಚ್. ನಾಗಭೂಷಣ ರಾವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಕೆಲ ಪ್ರಕರಣಗಳಲ್ಲಿ ಎಲ್ಲವೂ ಆರೋಪಿ ವಿರುದ್ಧವೇ ಇದೆ ಎಂದು ಪೊಲೀಸ್ ಅಧಿಕಾರಿಗಳು ಪ್ರತಿಪಾದಿಸುವುದನ್ನು ನ್ಯಾಯಾಲಯ ಗಮನಿಸಿದೆ. ಆರೋಪಿಯ ತಪ್ಪೊಪ್ಪಿಗೆ ಹೇಳಿಕೆ ಬಗ್ಗೆಯೂ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾರೆ ಎಂದು ಹೇಳಿತು.
‘ಆರೋಪಿ ಅಥವಾ ದೂರುದಾರರ ಗುರುತು ಬಹಿರಂಗಪಡಿಸುವುದು, ತನಿಖೆ ಸಮಯದಲ್ಲಿ ಸಂಗ್ರಹಿಸಿದ ವಸ್ತುಗಳನ್ನು ಪ್ರದರ್ಶಿ ಸುವುದು ಆರೋಪಿಯ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಜುಲೈ 20ರೊಳಗೆ ಮಾರ್ಗಸೂಚಿ ರೂಪಿಸಬೇಕು’ ಎಂದು ಪೀಠ ತಿಳಿಸಿತು.
‘ತನಿಖೆ ಹಂತದಲ್ಲಿರುವ ಪ್ರಕರಣಗಳ ಬಗ್ಗೆ ಪೊಲೀಸರು ಮಾಹಿತಿ ಬಹಿರಂಗಪಡಿಸುವುದಿಲ್ಲ’ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ಈ ನಿಟ್ಟಿನಲ್ಲಿ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು.