ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ: ಜುಲೈ 3ನೇ ವಾರದಲ್ಲಿ ಪರೀಕ್ಷೆ
ಬೆಂಗಳೂರು: ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಜುಲೈ ಮೂರನೇ ವಾರದಲ್ಲಿ ಮುಹೂರ್ತ ನಿಗದಿಪಡಿಸಿರುವ ರಾಜ್ಯ ಸರ್ಕಾರ ಶನಿವಾರ ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ sslc.karnataka.gov.in ನಲ್ಲಿ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆಯಾಗಿದೆ. ಇಲಾಖೆ ಮೂರು ದಿನಗಳ ಹಿಂದೆಯೇ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಿತ್ತು, ಇದೀಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟಿಸಲಾಗಿದೆ.
ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಕೇವಲ ಎರಡೇ ದಿನ ನಡೆಯಲಿದ್ದು, ಅದು ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇಲಾಖೆಯ ವೆಬ್ ಸೈಟ್ ಗಳಿಂದ ಮಾದರಿ ಪ್ರಶ್ನೆಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಮತ್ತು ಈ ನಿಟ್ಟಿನಲ್ಲಿ ಶಾಲೆಯ ಶಿಕ್ಷಕರು ಕೂಡ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವಂತೆ ಸೂಚಿಸಲಾಗಿದೆ.