ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಬಿಜೆಪಿಯ ಹಿರಿಯ ಮುಖಂಡೆಯಾಗಿರುವ ಶೋಭಾ ಕರಂದ್ಲಾಜೆ 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಇನ್ನು ಚಿತ್ರದುರ್ಗ ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಕೂಡಾ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸದರಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹೆಗ್ಗಳಿಕೆಗೆ ಎ.ನಾರಾಯಣ ಸ್ವಾಮಿ ಪಾತ್ರರಾದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಿವಾಸಿಯಾದ ಇವರು ಕೃಷಿ, ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಬಳಿಕ ಬೀದರ್ ಸಂಸದ ಭಗವಂತ ಖೂಬಾ ಬಿಜೆಪಿಯ ಬೀದರ್ ಸಂಸದ ಭಗವಂತ ಖೂಬಾ 17 ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿಕರೂ ಆಗಿರುವ ಖೂಬಾ, ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದಾರೆ.