ಸಹಕಾರ ಸಂಸ್ಥೆಗಳ ನಿಯಂತ್ರಣ ಸ್ವಾಗತಾರ್ಹ: ಸಹಕಾರ ಸಚಿವ ಸೋಮಶೇಖರ್

ಮಂಗಳೂರು: ಪ್ರಮುಖ ಸಹಕಾರಿ ಸಂಸ್ಥೆಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಣಕ್ಕೆ ಒಪ್ಪಿಸುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಇದರಿಂದ ಸಹಕಾರ ಸಂಸ್ಥೆಗಳಲ್ಲಿನ ವಂಚನೆ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆಲವೇ ಸಹಕಾರ ಸಂಸ್ಥೆಗಳಿಂದ ಇಡೀ ಸಹಕಾರ ಕ್ಷೇತ್ರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇಂತಹ ಪ್ರಕರಣಗಳನ್ನು ತಡೆಯಲು ರಿಸರ್ವ್ ಬ್ಯಾಂಕ್ ಕ್ರಮ ಕೈಗೊಳ್ಳಲಿದೆ. ಈ ನಿರ್ಧಾರಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ಕೇಂದ್ರ ಸರ್ಕಾರ ತರುತ್ತಿರುವ ತಿದ್ದುಪಡಿಯನ್ನೂ ರಾಜ್ಯ ಸರ್ಕಾರ ಸ್ವಾಗತಿಸುತ್ತದೆ. ಎಪಿಎಂಸಿಯಲ್ಲಿ ಮಾರಾಟವಾಗುವ ಕೃಷಿ ಉತ್ಪನ್ನಗಳಿಗೆ ವಿಧಿಸುತ್ತಿರುವ ಶೇಕಡ 1.5ರಷ್ಟು  ಸೆಸ್ ಅನ್ನು ಕಡಿಮೆ ಮಾಡುವ ಪ್ರಸ್ತಾವವಿದೆ. ಜುಲೈ 9ರಂದು ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರಲಾಗುವುದು ಎಂದು ಸೋಮಶೇಖರ್ ಹೇಳಿದರು.

ರಾಜ್ಯ ಅಪೆಕ್ಸ್ ಬ್ಯಾಂಕ್, ಎಲ್ಲ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಒಂದೇ ತಂತ್ರಾಂಶ ಜಾರಿಗೆ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಟ್ಯಾಬ್ ಬ್ಯಾಂಕಿಂಗ್ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮುಜರಾಯಿ , ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಶಾಸಕ ವೇದವ್ಯಾಸ ಕಾಮತ್, ನಿರ್ದೇಶಕರುಗಳಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ರಾಜು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!