ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ – ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಡಿಕೆಶಿ


ಮಗಳೂರು,ಜು.22 (ಉಡುಪಿ ಟೈಮ್ಸ್ ವರದಿ): ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಕಳೆದ ಆದಿತ್ಯವಾರ ಯೋಗ ಮಾಡುತ್ತಿದ್ದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಜಾರಿಬಿದ್ದು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ವಿವಿಧ ಕಾಂಗ್ರೆಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಕಾಂಗ್ರೆಸ್ಸಿಗನ ಆರೋಗ್ಯ ವಿಚಾರಿಸಿದ್ದಾರೆ.

ಉಡುಪಿ ಮತ್ತು ಮಂಗಳೂರಿನ ಪ್ರಮುಖ ವೈದ್ಯರು ಆಸ್ಕರ್ ಫೆರ್ನಾಂಡಿಸ್ ರವರ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಮುಖ ವೈದ್ಯರೊಂದಿಗೆ ಆಸ್ಕರ್ ಆರೋಗ್ಯದ ಬಗ್ಗೆ ಮಾತುಕತೆ ನಡೆಸಿದ್ದಾರೆ. 


ಈ ವೇಳೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಪ್ರಮುಖರಾದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಆಸ್ಕರ್ ಫೆರ್ನಾಂಡಿಸ್ ಅವರ ಕಾರ್ಯದರ್ಶಿ ನಾಗೇಶ್ ಕುಮಾರ್ ಉದ್ಯಾವರ, ಉದ್ಯಮಿ ರೊನಾಲ್ಡ್ ಮನೋಹರ್ ಕರ್ಕಡ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!