‘ಅಭಿನಯ ಶಾರದೆ’ ಹಿರಿಯ ನಟಿ ಜಯಂತಿ ಇನ್ನಿಲ್ಲ

ಬೆಂಗಳೂರು: ಅಭಿನಯ ಶಾರದೆ ಎಂಬ ಬಿರುದಾಂಕಿತೆ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಯಂತಿ (76) ನಿಧನರಾಗಿದ್ದಾರೆ.

ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಇಂದು ಬದುಕಿಗೆ ವಿದಾಯ ಹೇಳಿದ್ದಾರೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ. ಕನ್ನಡದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಕನ್ನಡದ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಜಯಂತಿಯವರದ್ದು.

1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಬಂದ ನಂತರ ಜಯಂತಿಯಾದರು. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೆ, ತಾಯಿ ಸಂತಾನಲಕ್ಷ್ಮಿ ಗೃಹಿಣಿ.

ಜಯಂತಿಯವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ವೈ ಆರ್ ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ. ಅಲ್ಲಿಂದಲೇ ಕಮಲಾ ಕುಮಾರಿ ಜಯಂತಿಯಾಗಿದ್ದು.

ಕನ್ನಡ ಚಿತ್ರರಂಗದಲ್ಲೆ  ಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು, ಪಾತ್ರ ಬೇಡುವ ರೀತಿಯಲ್ಲಿ ಅಭಿನಯಿಸುತ್ತಿದ್ದರು.

ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ.

ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು

Leave a Reply

Your email address will not be published. Required fields are marked *

error: Content is protected !!