ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

‘ಬಸವರಾಜ ಬೊಮ್ಮಾಯಿ ಎಂಬ ಹೆಸರಿನ ನಾನು ಕಾನೂನಿನ ಮೂಲಕ ಸ್ಥಾಪಿತ ಭಾರತ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನೆರವೇರಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ–ದ್ವೇಷವಿಲ್ಲದೆ ಎಲ್ಲರಿಗೂ ನ್ಯಾಯ ಒದಗಿಸಿಕೊಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಎಂದು ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದರು

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬೊಮ್ಮಾಯಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಕಡತಗಳಿಗೆ ಸಹಿ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.  

ಮಾಜಿ ಸಚಿವರು, ಶಾಸಕರು, ಬಿಜೆಪಿ ಮುಖಂಡರು ತಂಡೋಪತಂಡವಾಗಿ ಬಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕಾರ್ಯಕ್ರಮದಲ್ಲಿ ಹಾಜರಿದ್ದರು. ಕೋಟ‌ ಶ್ರೀನಿವಾಸ ಪೂಜಾರಿ, ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಡಾ.ಕೆ. ಸುಧಾಕರ್, ಬೈರತಿ ಬಸವರಾಜ,‌ ಎಸ್. ಸುರೇಶ್ ಕುಮಾರ್, ವಿ. ಸೋಮಣ್ಣ, ಕೆ.ಸಿ. ನಾರಾಯಣ ಗೌಡ, ಎಂ.ಟಿ.ಬಿ. ನಾಗರಾಜ್ ಸೇರಿದಂತೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಹಲವಾರು ಭಾಗಿಯಾಗಿದ್ದರು.

ಸವಾಲುಗಳು ನನ್ನ ಮುಂದಿವೆ: ಆರ್ಥಿಕ, ಸಾಮಾಜಿಕ ಸವಾಲುಗಳಿವೆ. ಎಲ್ಲ ಸಹೋದ್ಯೋಗಿಗಳ, ಪಕ್ಷದ ಹಿರಿಯ ಸಹಕಾರದಿಂದ ಸವಾಲುಗಳನ್ನು ಮೆಟ್ಟಿಲುಗಳಾಗಿ ಮಾಡಿ ಎದುರಿಸುವ ಆತ್ಮ ವಿಶ್ವಾಸವಿದೆ’ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮುಖ್ಯಮಂತ್ರಿಯಾಗಿ ‍ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜಭವನದ ಬಳಿ ಮಾತನಾಡಿದ ಅವರು ‘ದಕ್ಷ , ಪ್ರಾಮಾಣಿಕ, ಜನಪರ ಆಡಳಿತವನ್ನು ನಮ್ಮ ಸರ್ಕಾರ ಕೊಡುತ್ತದೆ. ಬಡವರ, ದೀನ ದಲಿತರ, ಹಿಂದುಳಿದ ವರ್ಗದವರ ಕಣ್ಣೀರು ಒರೆಸುವ ಕೆಲಸವನ್ನು ಸರ್ಕಾರ ಮಾಡಲಿದೆ.  ಪ್ರಾದೇಶಿಕ ಸಮತೋಲನವನ್ನು ನೀಗಿಸಲು ಪ್ರಯತ್ನಿಸುತ್ತೇನೆ’ ಎಂದರು.

‘ಎಲ್ಲರನ್ನೂ ಒಗ್ಗೂಡಿಸಿ ತೆಗೆದುಕೊಂಡು ಹೋಗುತ್ತೇನೆ. ನಾನು ಮುಖ್ಯಮಂತ್ರಿ ಎನ್ನುವುದಕ್ಕಿಂತಲೂ ತಂಡವಾಗಿ ಸರ್ಕಾರ ಕೆಲಸ ಮಾಡಲಿದೆ. ಎಲ್ಲ ಸವಾಲುಗಳನ್ನು ಒಟ್ಟಾಗಿ ಎದುರಿಸುತ್ತೇನೆ’ ಎಂದೂ ಹೇಳಿದರು. 

Leave a Reply

Your email address will not be published. Required fields are marked *

error: Content is protected !!