| ಬೆಂಗಳೂರು ಜು.28: ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿ ಸಬೇಕು. ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು ಅನುಷ್ಠಾನ ಮಾಡುವುದು ಎಷ್ಟು ಕಷ್ಟ ಎಂಬುದನ್ನು ಅರಿತೇ ಈ ಮಾತನ್ನಾಡುತ್ತಿದ್ದೇನೆ ಎಂದು ತಿಳಿಸಿದರು.
ಇದೇ ವೇಳೆ ಮಾತು ಮುಂದುವರೆಸಿದ ಅವರುಪ್ರಗತಿಪರ, ಪರಿಣಾಮಕಾರಿ ಆಡಳಿತ ಕೊಟ್ಟ ಹೆಗ್ಗಳಿಕೆ ನಮ್ಮ ರಾಜ್ಯದ್ದು. ಬದಲಾದ ಪರಿಸ್ಥಿತಿಯಲ್ಲಿ ನಾವು ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಬೇಕಾಗಿದೆ. ಸಚಿವ ಸಂಪುಟದ ನಿರ್ಣಯಗಳು ಕಾಲಮಿತಿಯಲ್ಲಿ ಅನುಷ್ಠಾನಗೊಳ್ಳಬೇಕು. ವಿಳಂಬವಾದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ಆಡಳಿತದಲ್ಲಿ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ. ಆದ್ದರಿಂದ ಸರ್ಕಾರದ ನಿರ್ಣಯಗಳು ನಿಗದಿತ ಕಾಲಮಿತಿಯಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂದು ತಿಳಿಸಿದರು.
ಎಲ್ಲ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ನೀತಿ, ನಿಯಮಾವಳಿಗಳು, ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟತೆಯನ್ನು ಹೊಂದಿದ್ದು ಕಾರ್ಯನಿರ್ವಹಿಸಬೇಕು. ಒಳ್ಳೆಯ ಕೆಲಸಗಳನ್ನು ಯಾವುದೇ ಹಿಂಜರಿಕೆಯಿಲ್ಲದೆ ಧೈರ್ಯದಿಂದ ಮಾಡಿ. ಸರ್ಕಾರ ನಿಮ್ಮೊಂದಿಗೆ ಇರುತ್ತದೆ ಎಂದು ಭರವಸೆ ನೀಡಿದರು.
ಪ್ರಸ್ತುತ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವುದು ಹಾಗೂ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರತಿ ಇಲಾಖೆಯಲ್ಲಿ ವರ್ಷಾಂತ್ಯದ ವೇಳೆಗೆ ಶೇ.5 ರಷ್ಟು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ನಿಗದಿತ ಕಾಲಮಿತಿಯಲ್ಲಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತಂಡ ಸ್ಫೂರ್ತಿಯಿಂದ ಕೆಲಸ ಮಾಡಬೇಕು. ಜೊತೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಮತ್ತೊಮ್ಮೆ ವಿವರವಾಗಿ ಚರ್ಚಿಸಿ, ಗೊಂದಲ ನಿವಾರಣೆಗೆ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಅಲ್ಲದೆ ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡುವ ಮೂಲಕ ದಕ್ಷತೆಯಿಂದ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.
| |