ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ- ಕಾನೂನಿನಲ್ಲಿ ಅವಕಾಶ ಎಲ್ಲಿದೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಆ.10: ಉಡುಪಿಯ ಶಿರೂರು ಮಠಕ್ಕೆ ಬಾಲ ಪೀಠಾಧಿಪತಿಯನ್ನು ನೇಮಕ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಅಪ್ರಾಪ್ತರ ಸಮ್ಮತಿಗೆ ಕಾನೂನಿನಲ್ಲಿ ಅವಕಾಶ ಎಲ್ಲಿದೆ ಎಂದು  ಹೈಕೋರ್ಟ್ ಪ್ರಶ್ನಿಸಿದೆ.

ಶಿರೂರು ಮಠಕ್ಕೆ ಬಾಲ ವಟುವನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ.ಲಾತವ್ಯ ಆಚಾರ್ಯ ಹಾಗೂ ಇತರ 4 ಮಂದಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. 

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅಪ್ರಾಪ್ತರ ನೇಮಕಕ್ಕೆ ಕಾನೂನಿನಲ್ಲಿ ಅವಕಾಶ ಎಲ್ಲಿದೆ? ಮಗನ ಸನ್ಯಾಸಕ್ಕೆ ಪೋಷಕರು ಒಪ್ಪಿಗೆ ನೀಡಲು ಸಾಧ್ಯವೇ? ಎಂದು ಪ್ರಶ್ನೆ ಹಾಕಿತು. ಜತೆಗೆ ಸೆ.13ರೊಳಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೇರಿ ಎಲ್ಲ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿತು.

ಈ ಅರ್ಜಿಯ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಈ ವಿಚಾರವಾಗಿ ರಾಜ್ಯ ಸರಕಾರ, ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಬಾಲಕನನ್ನು ನೇಮಿಸಲಾಗಿದೆ. ಈ ರೀತಿ ಅಪ್ರಾಪ್ತರನ್ನು ನೇಮಿಸುವುದು ಕಾನೂನು ಬಾಹಿರ. ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸೋದೆ ಮಠಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಿದ್ದೂ, ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿಗಳು ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನು ಬಾಹಿರ ಕ್ರಮ. ಹೀಗಾಗಿ, ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಯಾವುದೇ ವ್ಯಕ್ತಿಯನ್ನು ನೇಮಕ ಮಾಡಲು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಗೆ ಅಧಿಕಾರವಿಲ್ಲ ಎಂದು ಘೋಷಿಸಬೇಕು. ಜತೆಗೆ ಅಪ್ರಾಪ್ತರನ್ನು ಶಿರೂರು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನು ಬಾಹಿರ ಕ್ರಮವೆಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

Leave a Reply

Your email address will not be published. Required fields are marked *

error: Content is protected !!