ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್- ರಾಜ್ಯ ಕಾಂಗ್ರೆಸ್’ನಲ್ಲಿ ಸಂಚಲನ
ನವದೆಹಲಿ ಅ.5: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೆಹಲಿ ಬರುವಂತೆ ಹೈಕಮಾಂಡ್ ಆಹ್ವಾನಿಸಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ.
ಹೈಕಮಾಂಡ್ ಬುಲಾವ್ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಿಢೀರ್ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ ದೆಹಲಿಗೆ ಪ್ರಯಾಣಿಸಲಿರುವ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಧ್ಯಾಹ್ನ ಭೇಟಿ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಪದಾಧಿಕಾರಿಗಳ ಪಟ್ಟಿಯನ್ನು 400 ರಿಂದ 250 ಕ್ಕೆ ಇಳಿಸಲು ಹೈಕಮಾಂಡ್ ಸೂಚಿಸಿತ್ತು. ಆದರೆ ಇಬ್ಬರೂ ನಾಯಕರು ತಮ್ಮ ಆಪ್ತರ ಹೆಸರನ್ನು ಕೈಬಿಡಲು ಸಿದ್ಧರಿಲ್ಲ. ಸ್ವತಃ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಧ್ಯಸ್ಥಿಕೆ ವಹಿಸಿದರೂ ಸಂಧಾನ ಸಾಧ್ಯವಾಗಿಲ್ಲ. ಹೀಗಾಗಿ ಈ ಬಿಕ್ಕಟ್ಟಿಗೆ ಅಂತ್ಯ ಹಾಡಲು ಸಿದ್ದರಾಮಯ್ಯರನ್ನ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ.
ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಮ್ಮತ ಮೂಡಿಲ್ಲ. ಇಬ್ಬರ ನಡುವಿನ ಪ್ರತಿಷ್ಠೆಯ ಜಿದ್ದಾಜಿದ್ದಿನಿಂದ ಪದಾಧಿಕಾರಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಈಗಾಗಲೇ 400 ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಕಳುಹಿಸಿಕೊಟ್ಟಿದೆ. ಈ ಪಟ್ಟಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಬೆಂಬಲಿಗರೇ ತುಂಬಿದ್ದಾರೆ ಎಂದು ಹೇಳಲಾಗುತ್ತಿದೆ.