| ಬೆಂಗಳೂರು ನ.2 : ಬಾರೀ ಕುತೂಹಲ ಕೆರಳಿಸಿದ್ದ ಸಿಂದಗಿ ಕ್ಷೇತ್ರದ ಮಿನಿ ಸಮರದ ಅಂತಿಮ ತೀರ್ಪು ಹೊರಬಿದ್ದಿದ್ದು ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದ್ದು, ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಅವರು 31,185 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ
ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 93,865 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ನಾಜೀಯಾ ಅಂಗಡಿ 4353 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಇತ್ತ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಖಚಿತವಾಗುತ್ತಿದ್ದಂತೆ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್, 2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ದಿವಂಗತ ಎಂ.ಸಿ.ಮನಗೂಳಿ ವಿರುದ್ಧ ಪರಾಭವಗೊಂಡಿದ್ದರು. ಆದರೆ ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರ ನಿಧನದ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.
ರಮೇಶ್ ಭೂಸನೂರ ಈ ಹಿಂದೆ ಮಂಡಲ ಪ್ರಧಾನರಾಗಿ, ಕುಮಸಗಿ ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯರಾಗಿ ಮತ್ತು ಆಲಮೇಲ ಕ್ಷೇತ್ರದ ಜಿಲ್ಲಾ ಪಂಚಾಯತ್ ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರು. 2008 ರಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.
| |