ಉಡುಪಿ: ಇಂದು 53 ಜನರಿಗೆ ಕೋವಿಡ್ 19 ಸೋಂಕು ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು 53 ಜನರಿಗೆ ಕೋವಿಡ್ 19 ಸೋಂಕು ಪಾಸಿಟಿವ್ ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1382 ಮಂದಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 401 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿಂದು 885 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 832 ಜನರ ವರದಿ ನೆಗೆಟಿವ್ ಆಗಿದೆ. 53 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ಪಾಸಿಟಿವ್ ಕಂಡು ಬಂದಿದೆ. ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ವೈದ್ಯರು ಮತ್ತು ನಾಲ್ವರು ಸಿಬ್ಬಂದಿಗಳಿಗೂ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರೊಂದಿಗೆ ಉಡುಪಿ ನಗರಸಭೆಯ ಇಬ್ಬರು ಸದಸ್ಯೆಯರಿಗೆ ಕೂಡಾ ಕೋವಿಡ್ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 87 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 60 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 87 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1975 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3176 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253 ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1076 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 18466 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. |