ಸೋಂಕಿತರ ಮನೆ ಮುಂದೆ ಎಚ್ಚರಿಕೆ ಫಲಕ ಹಾಕುವುದನ್ನು ನಿಲ್ಲಿಸಿ: ಹೆಚ್ ಡಿಕೆ ಒತ್ತಾಯ

ಬೆಂಗಳೂರು: ಕೋವಿಡ್​-19 ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕು ಗುಣಮುಖವಾದ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸುವ ಕೆಲಸ ಮಾಡಲಿ. ಮನೆಯಿಂದ ಹೊರಬಾರದಂತೆ ತಿಳಿಹೇಳಲಿ. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನು ಕೊರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು ನಿರ್ಧಾರ. ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು ಎಂಸಿಐಗೆ, ಸರ್ಕಾರಕಲ್ಲ ನೆನಪಿರಲಿ. ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌ ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!