ಗುಪ್ತಚರ ಇಲಾಖೆ ಸತ್ತಿದೆ, ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ- ಸಿದ್ದರಾಮಯ್ಯ

ಬೆಳಗಾವಿ: ಇಲ್ಲಿನ ಅನಗೋಳದ ಕನಕದಾಸ ಕಾಲೊನಿಗೆ ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಘಟನೆ ಬಗ್ಗೆ ಮಾಹಿತಿ ಪಡೆದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಘಟನೆ ಖಂಡನೀಯ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ರಾಯಣ್ಣ ಒಂದೇ ಜಾತಿಗೆ ಸೀಮಿತವಾದ ನಾಯಕನಲ್ಲ. ಕಿಡಿಗೇಡಿಗಳು ಭಗ್ನಗೊಳಿಸಿದ ಪ್ರತಿಮೆಯನ್ನು ಪೊಲೀಸರು ಸರಿಪಡಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಎಂಇಎಸ್ ವಿರುದ್ಧ ಕನ್ನಡ ಸಂಘಟನೆಗಳ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಾರಿಗೆ ಅನ್ಯಾಯವಾದರೂ ಪ್ರತಿಭಟಿಸುವ ಹಕ್ಕಿದೆ. ಹಾಗಾಗಿ ಕನ್ನಡ ಸಂಘಟನೆಗಳಿಗೆ ಪ್ರತಿಭಟನೆಗೆ ಅವಕಾಶ ನೀಡಬೇಕು. ಎಂಇಎಸ್ ನವರು ಪುಂಡರು. ಅವರಿಗೆ ಕಾನೂನು ಇಲ್ಲದಂತಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಿಡಿಗೇಡಿಗಳು ಆಯುಧಗಳನ್ನು ಹಿಡಿದುಕೊಂಡು ನಗರದಲ್ಲಿ  ಸುತ್ತಾಡುತ್ತಾರೆ. ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಇವರಿಗೆ ಭಯ ಇಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತಿದೆ. ಗುಪ್ತಚರ ಇಲಾಖೆ ಸತ್ತು ಹೋಗಿದೆ ಎಂದು ಆರೋಪಿಸಿದರು.

ಇನ್ನೊಂದೆಡೆ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗೂ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದಾರೆ. ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಧಾರವಾಡದಿಂದ ಬೆಳಗಾವಿಯತ್ತ ಹೊರಟಿದ್ದಾರೆ. ಅವರನ್ನು ಹಿರೇಬಾಗೇವಾಡಿ ಟೋಲ್ ಬಳಿಯೇ ತಡೆಯುವುದಕ್ಕಾಗಿ ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಸಾಧ್ಯತೆ‌ ಇದೆ. 

Leave a Reply

Your email address will not be published. Required fields are marked *

error: Content is protected !!