‘ಸೇವಾ ಹಿ ಸಂಘಟನ್ ಬಿಜೆಪಿ ಇ-ಬುಕ್’ ಹೊಸ ಮೈಲುಗಲ್ಲು: ಕುಯಿಲಾಡಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ‘ಸೇವಾ ಹೀ ಸಂಘಟನ್’ ಪರಿಕಲ್ಪನೆಯಲ್ಲಿ ಕೋವಿಡ್-೧೯ ಮುಂಜಾಗ್ರತಾ ಕ್ರಮದ ಲಾಕ್‌ಡೌನ್ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ನಡೆದ ವಿವಿಧ ಸೇವಾ ಚಟುವಟಿಕೆಗಳನ್ನು ಡಿಜಿಟಲ್ ದಾಖಲೀಕರಣಗೊಳಿಸಿ ರಾಷ್ಟ್ರ, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಇ-ಬುಕ್ ರಚಿಸುವ ಪ್ರಕ್ರಿಯೆ ರಾಜಕೀಯ ಕ್ಷೇತ್ರದಲ್ಲೇ ಹೊಸ ಮೈಲುಗಲ್ಲು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಬಿಜೆಪಿಯ ಸೂಚನೆಯಂತೆ ಪಕ್ಷದ ವತಿಯಿಂದ ಕೊರೊನಾ ಬಗ್ಗೆ ಜಾಗ್ರತಿ ಮೂಡಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ ಪ್ರಚಾರ ನಡೆಸುವುದರ ಜೊತೆಗೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಜುಲೈ 26 ರಂದು ಪ್ರಥಮ ವರ್ಷವನ್ನು ಪೂರೈಸಲಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಡಿಜಿಟಲ್ ಮಾಧ್ಯಮದ ಮೂಲಕ ನಡೆಸಲಿರುವ ಸಂವಾದದಲ್ಲಿ ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಹಾಗೂ ಜಿಲ್ಲಾ ಇ-ಬುಕ್ ರಚನಾ ತಂಡಕ್ಕೆ ಮಂಡಲವಾರು ಅಗತ್ಯ ಮಾಹಿತಿಗಳನ್ನು ನೀಡಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಿಜೆಪಿ ಎಂಬುದು ‘ಪಾರ್ಟಿ ವಿದ್ ಎ ಡಿಫರೆನ್ಸ್’ ಎಂಬ ಮಾತಿದೆ. ಅದಕ್ಕೆ ಪೂರಕವಾಗಿ ಇಂದು ಗ್ರಾಮದಿಂದ ರಾಷ್ಟ್ರ ಮಟ್ಟದ ವರೆಗೆ ಪಕ್ಷ ಸಂಘಟನೆ ಅತ್ಯಂತ ಸಧೃಡವಾಗಿ ಬೆಳೆದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‌ಗಳ ಪ್ರಯೋಜವು ಸಮಾಜದ ಕಟ್ಟ ಕಡೆಯ ಅರ್ಹ ಫಲಾನುಭವಿಗಳನ್ನು ತಲುಪುವಂತಾಗಬೇಕು. ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಜನಪರ ಯೋಜನೆಗಳ ಸಮಗ್ರ ಮಾಹಿತಿಯನ್ನು ಅರಿತುಕೊಂಡು ಜವಾಬ್ದಾರಿಗಳನ್ನು ಹಂಚಿಕೊಳ್ಳುವ ಮೂಲಕ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜನಸಾಮಾನ್ಯರ ಸಂಕಷ್ಟಗಳಿಗೆ ಇನ್ನಷ್ಟು ಸ್ಪಂದಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಸಂಘಟನಾತ್ಮಕ ವಿಚಾರಗಳನ್ನು ಮಂಡಿಸಿ, ಮನೋಹರ್ ಎಸ್. ಕಲ್ಮಾಡಿ ಮತದಾರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!