ಕೊರೋನಾ 3ನೇ ಅಲೆ ಭೀತಿ- ಮತ್ತೆ ನೈಟ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ರೂಪಾಂತರಿ ಸೋಂಕು ತಡೆಗಟ್ಟುವ ನಿಟ್ಟನಲ್ಲಿ ರಾಜ್ಯಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ..
ನಿನ್ನೆ ರಾಜ್ಯದಲ್ಲಿ ಆರು ತಿಂಗಳ ಬಳಿಕ 1,033 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ರಾದ್ಯದಲ್ಲೂ ಮೂರನೇ ಅಲೆ ಭೀತಿ ಎದುರಾಗಿದ್ದು, ಫೆಬ್ರವರಿ ತಿಂಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಲಿದೆ ಎಂದು ತಜ್ಞರು ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ ಮೂರನೇ ಅಲೆ ಸುಳಿವು ನೀಡಿದ್ದು, ದೆಹಲಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ತಜ್ಞರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದರು.
ರಾಜ್ಯದಲ್ಲಿರುವ ವಸತಿ, ಶಾಲೆ, ಹಾಸ್ಟೆಲ್ , ಅಪಾರ್ಟ್ ಮೆಂಟ್, ಮಾಲ್ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮ ಪಾಲಿಸಬೇಕು , ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು, ಕ್ಲಸ್ಟರ್ ಗಳಿಂದ ಶೇ.30 ರಷ್ಟು ಎಲ್ಲ ಮಾದರಿಗಳನ್ನು ಕಡ್ಡಾಯವಾಗಿ ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಬೇಕೆಂದು ತಜ್ಞರು ಶಿಫಾರಸ್ಸು ಮಾಡಿರುವುದಾಗಿ ಅವರು ತಿಳಿಸಿದರು.