ಸುಳ್ಳು ಜಾಹೀರಾತು ನೀಡಿ ಸರ್ಕಾರ ಜನರಿಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ತಪ್ಪು ಮಾಹಿತಿ ನೀಡುತ್ತಿದೆ- ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಮೇಕೆದಾಟು ಯೋಜನೆಯ ಶೀಘ್ರ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ರಾಮನಗರ ಜಿಲ್ಲೆಯ ಕನಕಪುರ ಸಂಗಮದಿಂದ ಪದಯಾತ್ರೆಗೆ ಇಂದು ಭಾನುವಾರ ವಾರಾಂತ್ಯ ಕರ್ಫ್ಯೂ ಮಧ್ಯೆ ಚಾಲನೆ ನೀಡಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.
ಸರ್ಕಾರ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುವುದರ ಜೊತೆಗೆ ಸುಳ್ಳು ಜಾಹೀರಾತು ನೀಡುವ ಮೂಲಕ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಮೇಕೆದಾಟು ಪಾದಯಾತ್ರೆ ಬಗ್ಗೆ 2 ತಿಂಗಳ ಹಿಂದೆಯೇ ಘೋಷಣೆ ಮಾಡಿದ್ದೆವು. ಆದರೆ ಈ ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ಎಲ್ಲಾ ರೀತಿಯಿಂದ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಕರ್ಫ್ಯೂವನ್ನು, ರಾಮನಗರದಲ್ಲಿ ಸೆಕ್ಷನ್ 144 ನ್ನು ಹೇರಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಅಧಿಕಾರಕ್ಕೆ ಬಂದು 2 ವರ್ಷವಾಗಿದೆ. ಆದರೆ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿದೆ. ಜೊತೆಗೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಏನೂ ಮಾಡಿಲ್ಲ ಎಂದು ತಪ್ಪು ಮಾಹಿತಿ ನೀಡಿ, ಇದರಿಂದಲೇ ಮೇಕೆದಾಟು ಯೋಜನೆ ವಿಳಂಬವಾಗಿದೆ ಎಂದು ಜಾಹೀರಾತು ನೀಡುತ್ತಿದ್ದಾರೆ ಎಂದು ಆರೋಪಿಸಿದರು.