ಮುಖ್ಯಮಂತ್ರಿ ಯಡಿಯೂರಪ್ಪಗೆ ಸಮನ್ಸ್‌‌ ಜಾರಿ ಮಾಡಿದ ನ್ಯಾಯಾಲಯ

ಬೆಳಗಾವಿ: ಉಪಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 1ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗೋಕಾಕ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. ಕಳೆದ ತಿಂಗಳು 26ರಂದು ಆದೇಶ ನೀಡಿರುವ ನ್ಯಾಯಾಧೀಶ ಸಿ.ಕೆ. ವೀರೇಶಕುಮಾರ್‌, ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌ ಜಾರಿಗೊಳಿಸಲು ಸೂಚಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ 23ರಂದು ಗೋಕಾಕದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಪರ ಚುನಾವಣಾ ಸಮಾವೇಶ ನಡೆದಿತ್ತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಯಡಿಯೂರಪ್ಪ, ‘ವೀರಶೈವ ಲಿಂಗಾಯತ ಸಮುದಾಯದವರ ಒಂದು ಮತವೂ ಬೇರೆ ಕಡೆ ಹೋಗಬಾರದು’ ಎಂದು ಕರೆ ಮಾಡಿದ್ದರು.

ಚುನಾವಣೆ ವೇಳೆ ನಿರ್ದಿಷ್ಟ ಜನಾಂಗವನ್ನು ಓಲೈಸುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಯಾಗಿದ್ದ ಲಕ್ಷ್ಮಣ ತುಕ್ಕಪ್ಪ ಹಾಗೂ ಅವರ ಸಹಾಯಕ ಮಾರುತಿ ಗೋವಿಂದ ಉಪ್ಪಾರ ಅವರು ಜನಪ್ರತಿನಿಧಿಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಾಧೀಶ ಸಿ.ಕೆ. ವೀರೇಶಕುಮಾರ್‌ ಅವರು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳು ಲಭ್ಯ ಇವೆ ಎನ್ನುವುದು ನ್ಯಾಯಾಲಯಕ್ಕೆ ಮನವರಿಕೆಯಾಗಿದೆ. ಹೀಗಾಗಿ, ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌  ವಜಾಗೊಳಿಸಲಾಗಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!