ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರ ನಿರ್ಬಂಧ
ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ದಿನ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರ ನಿರ್ಬಂಧ ಹೇರಿದೆ. ಮುಸ್ಲಿಂ ಬಾಂಧವರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ ರಾಜ್ಯದಲ್ಲಿ ಆಗಸ್ಟ್ 1 ರಂದು ಆಚರಿಸಲಾಗುತ್ತಿದೆ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಲ್ಲಿ ಜುಲೈ 31 ರಂದು ಆಚರಿಸಲಾಗುತ್ತಿದೆ. ಬಕ್ರೀದ್ ಹಬ್ಬದ ದಿನ ಸಾಮಾನ್ಯವಾಗಿ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂಪ್ರದಾಯ ಇದೆ. ಆದರೆ ಕೊರೋನಾ ಹಿನ್ನೆಲೆಯಲ್ಲಿ ಈದ್ಗಾ ಅಥವಾ ಬಯಲು ಪ್ರದೇಶದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಸೀದಿಗಳಲ್ಲಿ ಬ್ಯಾಚ್ ಪ್ರಕಾರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ್ದು, ಗರಿಷ್ಠ 50 ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಬಹುದು. ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ನಮಾಜ್ ಸಲ್ಲಿಸುವವರು ಮಧ್ಯೆ ಕನಿಷ್ಟ 6 ಅಡಿ ಅಂತರ ಕಾಯ್ದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. |