ಉಡುಪಿ: 170 ಮಂದಿಯಲ್ಲಿ ಪಾಸಿಟಿವ್, 706 ನೆಗೆಟಿವ್
ಉಡುಪಿ: ಜಿಲ್ಲೆಯಲ್ಲಿ ರವಿವಾರವೂ 170 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದ್ದು, 706 ಜನರ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಇವರೆಗೆ 3387 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ 2122 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರಿದಿದೆ. ಕಳೆದ ನಾಲ್ಕು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದ ಸೋಂಕಿತರ ಸಂಖ್ಯೆ ಬರೋಬ್ಬರಿ 96 ಸಾವಿರದ ಗಡಿ ತಲುಪಿದೆ.
ಭಾನುವಾರ ರಾಜ್ಯದಲ್ಲಿ ಒಟ್ಟು 5199 ಪ್ರಕರಣಗಳು ವರದಿಯಾಗಿದ್ದು, 82 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 96,141ಕ್ಕೇರಿಕೆಯಾಗಿದೆ. ಮೃತರ ಸಂಖ್ಯೆ 1878ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1950 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43503ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 29 ಮಂದಿ ಬಲಿಯಾಗಿದ್ದಾರೆ.