ಹಿಜಾಬ್ ಸಂಘರ್ಷ- ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿ: ತುರ್ತು ವಿಚಾರಣೆ ನಡೆಸಲು ‘ಸುಪ್ರೀಂ’ ನಕಾರ
ನವದೆಹಲಿ: ಕಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ವಿಚಾರಣೆ ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಈಗ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಹೈಕೋರ್ಟ್ ನಲ್ಲಿ ಮೊದಲು ತೀರ್ಪು ಬರಲಿ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಈ ಮೂಲಕ ಹಿಜಾಬ್ ವಿವಾದ ಕುರಿತು ನಿನ್ನೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದವರಿಗೆ ಆರಂಭಿಕ ಹಿನ್ನಡೆಯಾದಂತಾಗಿದೆ.
ಇಂದು ಸುಪ್ರೀಂ ಕೋರ್ಟ್ ಹೇಳಿದ್ದೇನು?: ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ. ಇದನ್ನು ರಾಷ್ಟ್ರೀಯ ಮಟ್ಟದ ವಿಷಯವನ್ನಾಗಿ ಮಾಡಬೇಡಿ ಹಾಗೂ ಸುಪ್ರೀಂ ಕೋರ್ಟ್ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುತ್ತದೆ.
ಹಿಜಾಬ್ ವಿವಾದವನ್ನು ಖಂಡಿತವಾಗಿಯೂ ಪರಿಗಣಿಸುತ್ತೇವೆ. ಆದರೆ ಹೈಕೋರ್ಟ್ ತೀರ್ಪು ಮೊದಲು ಬರಲಿ, ಆಮೇಲೆ ನೋಡೋಣ ಎಂದು ವಕೀಲ ಕಾಮತ್ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಹೇಳಿದ್ದಾರೆ. ಕರ್ನಾಟಕದಲ್ಲಿ ಏನಾಗುತ್ತಿದೆ ಎಂದು ನೋಡುತ್ತಿದ್ದೇವೆ, ನಮಗೆ ಎಲ್ಲರ ಸಾಂವಿಧಾನ ಹಕ್ಕುಗಳನ್ನು ರಕ್ಷಿಸಬೇಕಿದೆ. ವಿದ್ಯಾರ್ಥಿಗಳ ಹಿತ ಕಾಪಾಡುವುದು ನಮ್ಮ ರಕ್ಷಣೆ, ಈ ವಿಚಾರ ಕುರಿತು ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳೂ ಯೋಚನೆ ಮಾಡಲಿ ಎಂದು ಕೂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಹೇಳಿದ್ದಾರೆ.