| ಉಡುಪಿ ಫೆ.15(ಉಡುಪಿ ಟೈಮ್ಸ್ ವರದಿ): ನಾಳೆ ರಾಜ್ಯಾದ್ಯಂತ ಕಾಲೇಜುಗಳು ಮತ್ತೆ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಹೈಸ್ಕೂಲ್ ವ್ಯಾಪ್ತಿಯಲ್ಲಿ ವಿಧಿಸಿದ್ದ ನಿಷೇದಾಜ್ಞೆಯನ್ನು ಕಾಲೇಜು ವ್ಯಾಪ್ತಿಗೂ ವಿಸ್ತರಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳುವ ಸಲುವಾಗಿ ಉಡುಪಿ ಜಿಲ್ಲೆಯಲ್ಲಿ ಫೆ.16 ರ ಬೆಳಿಗ್ಗೆ 6 ಗಂಟೆಯಿಂದ ಫೆ. 23 ರ ಸಂಜೆ 6 ಗಂಟೆಯವರೆಗೆ ರಾಜ್ಯದ ಎಲ್ಲಾ ಪದವಿಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ 200 ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಕಲಂ 144 ರ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ನಿಷೇದಾಜ್ಞೆ ಅವಧಿಯಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಭಂಧಿಸಲಾಗಿದೆ.ಯಾವುದೇ ವ್ಯಕ್ತಿಯ ಜಾತಿ/ಧರ್ಮ/ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಸರ್ಕಾರಿ ಸಂಸ್ಥೆಗಳು/ ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂಧಿಗಳ ವಿರುದ್ಧ ನಿಂಧಿಸುವಂತಹ/ಅವಹೇಳನಕಾರಿಯಂತಹ ಯಾವುದೇ ಘೋಷಣೆಗಳು/ಭಾಷಣಗಳು ಪ್ರಕಟಣೆಗಳು/ ಅವಾಚ್ಯ ಶಬ್ಧಗಳ ಬಳಕೆ/ಪ್ರಚೋದನಾಕಾರಿ ಭಾಷಣಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು. ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ/ರ‍್ಯಾಲಿ, ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದು, ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ, ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿದೆ.
ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಮಾಡುವುದು ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೋಗ ಮಾಡುವುದು, ಮತ್ತು ಚಿತ್ರಗಳನ್ನು ,ಸಂಕೇಗಳನ್ನು ಭಿತ್ತಿ ಪತ್ರಗಳನ್ನು ಆಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.
ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ, ಆಯಾ ಕಾಲೇಜು ಉಪನ್ಯಾಸಕರು/ಶಿಕ್ಷಕರು/ಸಿಬ್ಬಂಧಿ/ಪೋಷಕರು/ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ/ ಕಾಲೇಜು ಬಸ್ ಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯ ನಿರ್ವಹಣೆ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಬ್ಯಾಂಕ್/ ಎ.ಟಿ.ಎಂ. ಭದ್ರತಾ ಸಿಬ್ಬಂದಿಗಳು ಮತ್ತು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳು ಮತ್ತು ಕೋವಿಡ್ -19 ನಿಯಂತ್ರಣ ಕರ್ತವ್ಯದಲ್ಲಿರುವ ಸಿಬ್ಬಂದಿಗಳ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ. | |