ಈಶ್ವರಪ್ಪ ಅವರನ್ನು 11 ಗಂಟೆಯೊಳಗೆ ವಜಾ ಮಾಡದಿದ್ದರೇ ಸದನದಲ್ಲಿ ಪ್ರತಿಭಟನೆ ಮುಂದುವರಿಕೆ: ಸಿದ್ದರಾಮಯ್ಯ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್ ಪಾಲಿಗೆ ಹೊಸ ಅಸ್ತ್ರವಾಗಿದ್ದರೆ, ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಚಿವರ ವಿರುದ್ಧ ರಾಷ್ಟ್ರದ್ರೋಹದ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಈಶ್ವರಪ್ಪ ಅವರನ್ನು ವಜಾ ಮಾಡುವಂತೆ ಆಗ್ರಹಿಸುತ್ತಿದ್ದಾರೆ.
ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಎಸ್.ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವಿಟ್ಟರ್ ಪೋಸ್ಟ್ ಮಾಡಿರುವ ಅವರು, “ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ 11 ಗಂಟೆಯೊಳಗೆ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದಿನ ಕಲಾಪದಲ್ಲಿ ಆಡಳಿತರೂಢ ಬಿಜೆಪಿ ಹಾಗೂ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮಧ್ಯೆ ಜಂಗೀಕುಸ್ತಿಗೆ ಕಾರಣವಾಗುವ ಸಾಧ್ಯತೆ ಇದ್ದು, ಕೆ.ಎಸ್.ಈಶ್ವರಪ್ಪ ಅವರನ್ನು ವಜಾ ಮಾಡುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗುತ್ತಾರಾ? ಅಥವಾ ಬಿಜೆಪಿ ನಾಯಕರು ಈ ವಿಚಾರವನ್ನು ಸಮರ್ಥಿಸಿಕೊಂಡು ಕಲಾಪ ಸುಗಮವಾಗಿ ನಡೆಸುಕೊಂಡು ಹೋಗುವಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಸಫಲರಾಗುತ್ತಾರಾ ಅನ್ನೋದು ತೀವ್ರ ಕುತೂಹಲಕ್ಕೆ ಎಡೆ ಮಾಡಿ ಕೊಟ್ಟಿದೆ.