| ಬೆಂಗಳೂರು ಫೆ.18: ರಾಜ್ಯದಲ್ಲಿ ಹಿಜಾಬ್ ವಿವಾದದ ನಡುವೆಯೇ ಸರಕಾರ ಮುಸ್ಲಿಂ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನು ಸಂಗ್ರಹಿಸುತ್ತಿದೆ ಎಂಬ ಸುದ್ದಿ ವರದಿಯಾಗಿದೆ.
ಈ ಬಗ್ಗೆ ಮಾಧ್ಯಮದಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ, ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ, ಅದರಲ್ಲೂ ಮುಖ್ಯವಾಗಿ ಒಂದರಿಂದ ಹತ್ತನೇ ತರಗತಿವರೆಗಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿವರಗಳನ್ನು ರಾಜ್ಯ ಸರ್ಕಾರ ಗುಪ್ತವಾಗಿ ಸಂಗ್ರಹಿಸುತ್ತಿದೆ ವರದಿಯಾಗಿದೆ.
ಈ ಬಗ್ಗೆ ಸಮರ್ಥಿಸಿಕೊಂಡಿರುವ ಅಧಿಕಾರಿಗಳು, ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಚುನಾಯಿತ ಪ್ರತಿನಿಧಿಗಳು ಸದನದಲ್ಲಿ ಅಂಕಿಅಂಶವನ್ನು ಕೇಳಬಹುದು ಅಥವಾ ಹೈಕೋರ್ಟ್ ಕೂಡಾ ವಿಚಾರಣೆ ಸಂದರ್ಭದಲ್ಲಿ ಇಂಥ ಮಾಹಿತಿ ಕೇಳಬಹುದು ಎಂದು ಇಲಾಖೆಯ ಹೇಳಿದ್ದಾರೆ. ಇನ್ನು ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರತಿಕ್ರಿಯೆ ನೀಡಿ, ಪ್ರತಿದಿನ ಮಾಧ್ಯಮಗಳಲ್ಲಿ ಬರುತ್ತಿರುವ ತಪ್ಪುದಾರಿಗೆ ಎಳೆಯುವ ಅಂಕಿ ಅಂಶಗಳನ್ನು ವಿರೋಧಿಸುವ ಸಲುವಾಗಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗುರುವಾರ ಲಭ್ಯವಾಗಿರುವ ಅಂಕಿ ಅಂಶಗಳ ಪ್ರಕಾರ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಟ್ಟು 17,39,742 ಮಂದಿ ಮುಸ್ಲಿಂ ವಿದ್ಯಾರ್ಥಿಗಳು ಇದ್ದಾರೆ. ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಗರಿಷ್ಠ ಅಂದರೆ 1,55,104 ವಿದ್ಯಾರ್ಥಿಗಳು ಇದ್ದರೆ, ಕಲ್ಬುರ್ಗಿಯಲ್ಲಿ 1,31,802 ಮಂದಿ, ಬೆಂಗಳೂರು ಉತ್ತರ ಜಿಲ್ಲೆಯಲ್ಲಿ 1,22,993 ಮಂದಿ ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. ಚಾಮರಾಜನಗರದಲ್ಲಿ ಕನಿಷ್ಠ ಅಂದರೆ 9603 ಮುಸ್ಲಿಂ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.
ತಮ್ಮ ಸಂಸ್ಥೆಗಳಲ್ಲಿ ನೋಂದಾಯಿಸಿಕೊಂಡಿರುವ ಮುಸ್ಲಿಂ ವಿದ್ಯಾರ್ಥಿಗಳ ಬಗೆಗಿನ ವಿವರಗಳನ್ನು ಸಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕೆಲ ಖಾಸಗಿ ಶಿಕ್ಷಣಸಂಸ್ಥೆಗಳು ಬಹಿರಂಗಪಡಿಸಿವೆ. “ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲ ಕಾಲೇಜುಗಳನ್ನು ಸೂಕ್ಷ್ಮ ವಲಯಗಳೆಂದು ಪರಿಗಣಿಸಲು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಈ ಕ್ರಮ ಕೈಗೊಂಡಿರುವ ಸಾಧ್ಯತೆ ಇದೆ” ಎಂದು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಪಿಯು ಕಾಲೇಜಿನ ಪ್ರಾಚಾರ್ಯರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
| |