ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೆ ಮಾಲಿಕನ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ- ಹೈಕೋರ್ಟ್
ಬೆಂಗಳೂರು ಮಾ.25: ಮಾಲಿಕನಿಗೆ ಗೊತ್ತಿಲ್ಲದೇ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3(2)(ಬಿ) ಪ್ರಕಾರ ಯಾವುದೇ ಜಾಗದಲ್ಲಿ ಏನು ನಡೆಯುತ್ತಿದೆ ಎನ್ನುವುದು ಅದರ ಮಾಲಕನಿಗೆ ಗೊತ್ತಿದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪ ಸಂಬಂಧ ಚಂದ್ರಲೇಔಟ್ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದು ಪಡಿಸುವಂತೆ ಕೋರಿ ನಾಗರಭಾವಿ ನಿವಾಸಿ ಪ್ರಭುರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿದಾರರ ವಿರುದ್ಧದ ಎಫ್.ಐ.ಆರ್ ರದ್ದುಪಡಿಸಿ ಈ ಆದೇಶ ನೀಡಿದೆ.