ಒಂದು ದಿನ ಮೊದಲೇ ಗಂಗೊಳ್ಳಿಗೆ ಆಗಮಿಸಿದ ಪ್ರಮೋದ್ ಮುತಾಲಿಕ್

ಕುಂದಾಪುರ ಎ.15(ಉಡುಪಿ ಟೈಮ್ಸ್ ವರದಿ): ಇಂದು ಗಂಗೊಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಹೇರಿರುವ ನಿರ್ಬಂಧದ ನಡುವೆಯೂ ಒಂದು ದಿನ ಮೊದಲೇ ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ ಜಿಲ್ಲೆಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿಯೇ ಗಂಗೊಳ್ಳಿಗೆ ಬಂದಿದ್ದ ಪ್ರಮೋದ್ ಮುತಾಲಿಕ್ ಅವರು ಕಾರ್ಯಕ್ರಮದ ಕುರಿತಂತೆ ಹಿಂದೂ ಜಾಗರಣ ವೇದಿಕೆ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದ್ದು ಬಳಿಕ ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಪ್ರಮೋದ್‌ ಮುತಾಲಿಕ್‌ ಭಾಗಿಯಾಗಬೇಕಿತ್ತು. ಆದರೆ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. 

ಇದೀಗ ನಿರ್ಬಂಧ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗಂಗೊಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಮುತಾಲಿಕ್‌ ಅವರಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತದ  ವಿರುದ್ಧ ಹಿಂಜಾವೆ ಆಕ್ರೋಶ ವ್ಯಕ್ತಪಡಿಸಿದ್ದು,ಈ ವಿಚಾರವಾಗಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಕರೆ ಮಾಡಿದರೂ ಪ್ರತಿಕ್ರಿಯಿಸಿಲ್ಲ‌ ಎಂಬ ಆರೋಪಿಸಲಾಗಿದೆ. ಹಾಗೂ ಮುಂಬರುವ ಚುನಾವಣೆಯಲ್ಲಿ ಇದಕ್ಕೆ ಉತ್ತರಿಸುವುದಾಗಿ ಹೇಳಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!