| ಉಡುಪಿ, ಎ.16 (ಉಡುಪಿ ಟೈಮ್ಸ್ ವರದಿ): ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಸಮಗ್ರ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಉಡುಪಿಯ ಎಸ್‍ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಚಿಸಿರುವ ಎಸ್ಪಿ ನೇತೃತ್ವದ ವಿಶೇಷ ತಂಡಗಳನ್ನು ರಾಜ್ಯದ ವಿವಿಧ ಭಾಗಗಳಿಗೆ ಕಳುಹಿಸಲಾಗಿದೆ. ತನಿಖೆ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಈ ತಂಡಗಳು ಸಮಗ್ರ ತನಿಖೆ ನಡೆಸಲಿದೆ ಹಾಗೂ ಪ್ರಕರಣದ ಸಮರ್ಪಕವಾದ ತನಿಖೆ ನಡೆಲಿದೆ ಎಂದು ಭರವಸೆ ನೀಡಿದರು.
ವಿಧಿ ವಿಜ್ಞಾನ ಪ್ರಯೋಗಾಲಯವು ಸ್ವತಂತ್ರ ಸಂಸ್ಥೆಯಾಗಿದ್ದು ಅವರೇ ವರದಿಯನ್ನು ನೀಡಲಿದ್ದಾರೆ ತನಿಖೆ ಹಿನ್ನೆಲೆಯಲ್ಲಿ ಪೊಲೀಸ್ ವತಿಯಿಂದ ಆದಷ್ಟು ಬೇಗ ವರದಿಗಳನ್ನು ನೀಡುವಂತೆ ಅವರಿಗೆ ಮನವಿ ಮಾಡಲಾಗಿದೆ ಎಂದರು. ಪ್ರಕರಣದ ತನಿಖೆಯ ಮೇಲುಸ್ತುವಾರಿಯನ್ನು ವಹಿಸಿಕೊಂಡಿದ್ದು, ಸಮಗ್ರವಾಗಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿ, ಎಫ್‍ಎಸ್‍ಎಲ್ ವರದಿ ಎಲ್ಲವನ್ನು ಪಡೆದುಕೊಂಡು ಪರಿಶೀಲನೆ ಮಾಡಲಾಗುವುದು. ಈ ವರದಿಗಳು ಬಂದ ಬಳಿಕವಷ್ಟೇ ಸಂಪೂರ್ಣ ಮಾಹಿತಿ ನೀಡಲು ಸಾಧ್ಯ. ಅಲ್ಲಿವರೆಗೂ ತನಿಖೆ ನಡೆಯುತ್ತಿದೆ ಎಂದಷ್ಟೇ ಹೇಳಬಹುದು. ಈ ಹಂತದಲ್ಲಿ ಏನು ಹೇಳಲು ಆಗುವುದಿಲ್ಲ ಎಂದು ಅವರು ಹೇಳಿದರು.
| |