ಸಂತೋಷ್ ಪಾಟೀಲ್ ಮನೆಗೆ ಡಿ.ಕೆ ಶಿವಕುಮಾರ್ ಭೇಟಿ- 11 ಲಕ್ಷ ರೂ. ಪರಿಹಾರ ಚೆಕ್ ವಿತರಣೆ
ಬೆಳಗಾವಿ: ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ವಿರುದ್ಧ ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಸಂತೋಷ್ ಪಾಟೀಲ್ ಸಾವನ್ನಪ್ಪಿದಾಗ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ ಅವರು 11 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಬೆಳಗಾವಿಗೆ ತೆರಳಿ ಸಂತೋಷ್ ಪಾಟೀಲ್ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.
ಇದಲ್ಲದೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರು. ಪರಿಹಾರ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.