ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರುಎ.21: ಆರೋಗ್ಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಇಲಾಖೆ ಅಡಿಯಲ್ಲಿ ಬರುವ ಎಲ್ಲಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ಕಡ್ಡಾಯಗೊಳಿಸ ಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ.

ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ, ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನಿಜವಾದ ಕಾರಣಗಳಿಲ್ಲದೇ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ ಎಂದ ಅವರು, ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣ ಗಮನಕ್ಕೆ ಬಂದಿವೆ. ಅವರ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಆದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕರ್ತವ್ಯದ ವೇಳೆಯಲ್ಲಿ ವಿನಾಕಾರಣ ಗೈರಾಗುವ ಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ, ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸ್ಪಷ್ಟ ಎಚ್ಚರಿಕೆ ಜತೆಗೆ ಅಧಿಕೃತ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!