ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿ – ಎಲ್ಲಾ ರಾಜ್ಯದ ಸಿಎಂಗಳಿಗೆ ಪ್ರಧಾನಿ ಒತ್ತಾಯ
ನವದೆಹಲಿ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.
ದೇಶದಲ್ಲಿನ ಕೊರೊನಾ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದ ಅವರು, ಸಹಕಾರಿ ಫೆಡರಲಿಸಂನ ಉತ್ಸಾಹದಲ್ಲಿ ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದು, ಕಳೆದ ನವೆಂಬರ್‌ನಲ್ಲಿ ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಲಿಲ್ಲ ಎಂದರು.
ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಹೆಚ್ಚಿನ ದರಗಳ ಕಾರಣ ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಅನ್ನು ಕಡಿಮೆ ಮಾಡದ ರಾಜ್ಯಗಳನ್ನು ನಿರ್ದಿಷ್ಟವಾಗಿ ಒತ್ತಾಯಿಸಿದ್ದಾರೆ. ಇನ್ನು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಇಂಧನ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ ಮತ್ತು ತೆರಿಗೆಯನ್ನು ಕಡಿಮೆ ಮಾಡಲು ರಾಜ್ಯಗಳಿಗೆ ಮನವಿ ಮಾಡಿದೆ. ನಾನು ಯಾರನ್ನೂ ಟೀಕಿಸುವುದಿಲ್ಲ ಆದರೆ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಜಾರ್ಖಂಡ್ ಮತ್ತು ತಮಿಳುನಾಡು ಈಗ ವ್ಯಾಟ್ ಅನ್ನು ಕಡಿಮೆ ಮಾಡಲು ಮತ್ತು ಪ್ರಯೋಜನಗಳನ್ನು ನೀಡುವಂತೆ ವಿನಂತಿಸುತ್ತೇನೆ ಎಂದಿದ್ದಾರೆ. ಸಣ್ಣ ಮಕ್ಕಳು ಸೇರಿದಂತೆ ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸುವಂತೆ ಸೂಚನೆ ನೀಡಿದ ಅವರು, ಭಾರತದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಉಪ ಪ್ರಬೇಧವು ಹೊಸ ಸವಾಲನ್ನು ತಂದೊಡ್ಡಿದ್ದು, ಈ ಹಿಂದೆ ಮೂರು ಅಲೆಗಳನ್ನು ಯಶಸ್ವಿಯಾಗಿ ಎದುರಿಸಿದ್ದು, ಈಗ ನಾಲ್ಕನೇ ಅಲೆಯನ್ನೂ ಸಮರ್ಥವಾಗಿ ಎದುರಿಸಬೇಕಿದೆ ಎಂದು ಹೇಳಿದ್ದಾರೆ.