ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ: ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸಹಿತ ಐವರ ಬಂಧನ
ಕಲಬುರಗಿ ಎ.29: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸಹಿತ ಐವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮಾಲಕಿ ದಿವ್ಯಾ ಹಾಗರಗಿ, ಮುಖ್ಯ ಶಿಕ್ಷಕ ಕಾಶೀನಾಥ, ಶಿಕ್ಷಕಿಯರಾದ ಅರ್ಚನಾ, ಸುನಂದಾ ಹಾಗೂ ಅಭ್ಯರ್ಥಿ ಶಾಂತಿಬಾಯಿ ಬಂಧಿತರು. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದು, ಕಲಬುರಗಿಗೆ ಕರೆತರಲಾಗುತ್ತಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಇದೀಗ ಅಕ್ರಮ ಹಗರಣ ಬೆಳಕಿಗೆ ಬಂದ 18 ದಿನಗಳ ಬಳಿಕ ಆರೋಪಿ ದಿವ್ಯಾ ಹಾಗರಗಿ ಸಹಿತ ಐವರ ಬಂಧನವಾಗಿದೆ.
ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗುತ್ತಿದ್ದಂತೆ ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ವ್ಯಾಕವಾಗಿ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಒಬ್ಬ ಅಭ್ಯರ್ಥಿಯ ಒಎಂಆರ್ ಶೀಟ್ ಸಹ ಬಹಿರಂಗಗೊಂಡಿತ್ತು. ರಾಜ್ಯ ಸರ್ಕಾರ ಇದರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಇಲ್ಲಿಯ ಚೌಕ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುತ್ತಿದ್ದಂತೆ ದಿವ್ಯಾ ನಾಪತ್ತೆಯಾಗಿದ್ದರು.